SK Home Ad
Home ಸುದ್ದಿ ರಾಜ್ಯ ಡಿಸೆಂಬರ್‌ 30ರೊಳಗೆ ಸ್ಥಳೀಯ ಚುನಾವಣೆ: ನಾಳೆ ಮೀಸಲಾತಿ ಪ್ರಕಟ

ಡಿಸೆಂಬರ್‌ 30ರೊಳಗೆ ಸ್ಥಳೀಯ ಚುನಾವಣೆ: ನಾಳೆ ಮೀಸಲಾತಿ ಪ್ರಕಟ

0
237

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಡಿಸೆಂಬರ್ 30ರೊಳಗಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಸಂಬಂಧ ನಾಳೆ ಮೀಸಲಾತಿಯ ಕರಡು ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಪ್ರಕ್ರಿಯೆಯ ಜೊತೆಗೆ ಗ್ರಾಮ ಪಂಚಾಯಿತಿ ಚುನಾವಣೆಗಳಿಗೂ ಸಿದ್ಧತೆ ನಡೆಯುತ್ತಿದೆ. ನಾಳೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿ ಮೀಸಲಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.

ಕುಡಿಯುವ ನೀರಿಗೆ ಮೊದಲ ಆದ್ಯತೆ: ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಂಗಾರು ಬೆಳೆ ಸಂಪೂರ್ಣ ನಷ್ಟವಾಗಿರುವ ಪ್ರದೇಶಗಳಿವೆ. ಹಿಂಗಾರು ಬೆಳೆ ಪರಿಸ್ಥಿತಿಯೂ ಅನಿಶ್ಚಿತವಾಗಿದೆ. ಇಂತಹ ಸಂದರ್ಭದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಪ್ರಸ್ತುತ 859 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ, ಖಾಸಗಿ ಬೋರ್‌ವೆಲ್ ಹಾಗೂ ತೆರೆದ ಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸುವ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ 24 ಗಂಟೆಯೊಳಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.