ಬಾಗಲಕೋಟೆ: ಸವದತ್ತಿ ಯಲ್ಲಮ್ಮನ ದರ್ಶನ ಪಡೆದು ಸ್ವಗ್ರಾಮಕ್ಕೆ ಮರಳುತ್ತಿದ್ದ ಭಕ್ತರ ಕ್ರೂಸರ್ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕ್ರೂಸರ್ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 218ರ ಖಾನಾಪುರ ಖಣಿವೆಯ ಚಿರ್ಲಕೊಪ್ಪ ಕ್ರಾಸ್ ಬಳಿ ನಡೆದಿದೆ.
ವಿಜಯಪುರ ಜಿಲ್ಲೆಯ ಮಲಘಾಣ ಗ್ರಾಮದ ಭಕ್ತರು ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕ್ರೂಸರ್ನಲ್ಲಿ ಚಾಲಕ ಸೇರಿ 11 ಮಹಿಳೆಯರಿದ್ದರು. ಅಪಘಾತದ ರಭಸಕ್ಕೆ ವಾಹನ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕ್ರೂಸರ್ ಚಾಲಕ ಸೇರಿದಂತೆ ನಾಲ್ಕೈದು ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬುಲೆನ್ಸ್ ಮೂಲಕ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಪಲ್ಟಿಯಾಗಿದ್ದ ಕ್ರೂಸರ್ನ ಕಿಟಕಿ ಗಾಜುಗಳನ್ನು ಒಡೆದು ಒಳಗಿದ್ದವರನ್ನು ಹೊರತೆಗೆದು, ಗಾಯಾಳುಗಳನ್ನು ಆಟೊರಿಕ್ಷಾ ಮೂಲಕ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.





















