ಮಂಡ್ಯ: ಮಂಡ್ಯ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಸಿ.ಇ. ತಿಮ್ಮಯ್ಯ (57) ಅವರು ಅನಾರೋಗ್ಯದಿಂದ ಶನಿವಾರ (ಅಕ್ಟೋಬರ್ 10) ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ತಿಮ್ಮಯ್ಯ ಅವರು ಕಳೆದ ಮೂರು ವರ್ಷಗಳಿಂದ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕರ್ತವ್ಯನಿಷ್ಠ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಅವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆ, ಗಣಪತಿ ವಿಸರ್ಜನೆ ಸಂದರ್ಭದ ಗಲಾಟೆ, ಕೆರಗೋಡು ಧ್ವಜ ವಿವಾದ ಹಾಗೂ ಸಾರ್ವತ್ರಿಕ ಚುನಾವಣೆಗಳಂತಹ ಸೂಕ್ಷ್ಮ ಸಂದರ್ಭಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅವರು ಕಾರ್ಯನಿರ್ವಹಿಸಿದ್ದರು.






















