SK Home Ad
Home ಸುದ್ದಿ ದೇಶ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರದ ಭರವಸೆ: ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆ

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರದ ಭರವಸೆ: ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆ

0
111

ನವದೆಹಲಿ: ಕಬ್ಬು ಬೆಳೆಗಾರರು ಎದುರಿಸುತ್ತಿರುವ ಬೆಲೆ ನಿಗದಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರ ಅಹವಾಲುಗಳನ್ನು ಪರಿಶೀಲಿಸಲು ಒಂದು ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಭಯ ರಾಜ್ಯಗಳ ರೈತ ಮುಖಂಡರು ಹಾಗೂ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಕ್ಕರೆ ಉದ್ಯಮಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಿತು.

ತೂಕ, ವೇಸ್ಟೇಜ್‌ನಿಂದ ಎಫ್‌ಆರ್‌ಪಿವರೆಗೆ ಅಹವಾಲು: ಕಬ್ಬು ಮಾರಾಟದ ಸಂದರ್ಭದಲ್ಲಿ ತೂಕದಲ್ಲಿ ಆಗುತ್ತಿರುವ ವ್ಯತ್ಯಾಸ, ವೇಸ್ಟೇಜ್ ಹೆಸರಿನಲ್ಲಿ ನಡೆಯುತ್ತಿದೆ ಎನ್ನಲಾದ ಅನ್ಯಾಯ, ಸಕ್ಕರೆ ಇಳುವರಿ ಪ್ರಮಾಣದ ಲೆಕ್ಕಾಚಾರದಲ್ಲಿ ತಾರತಮ್ಯ ಹಾಗೂ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಸೇರಿದಂತೆ ಹಲವು ವಿಚಾರಗಳನ್ನು ರೈತರು ಸಭೆಯಲ್ಲಿ ಪ್ರಸ್ತಾಪಿಸಿದರು. ಇದರೊಂದಿಗೆ ರಾಜ್ಯ ಸರ್ಕಾರ ನಿಗದಿಪಡಿಸುವ ಎಸ್‌ಎಪಿ ದರ ಮತ್ತು ಎಥನಾಲ್ ಬೆಲೆ ಸಂಬಂಧಿತ ಸಮಸ್ಯೆಗಳ ಬಗ್ಗೆಯೂ ಗಮನ ಸೆಳೆದರು.

ರೈತರ ಬೇಡಿಕೆಗಳನ್ನು ಪರಿಶೀಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳು, ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು ಹಾಗೂ ರೈತ ಮುಖಂಡರನ್ನು ಒಳಗೊಂಡ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರಿಗೆ ನ್ಯಾಯಯುತ ಬೆಲೆ ದೊರೆಯುವ ಗುರಿ: ಕಬ್ಬು ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡುವುದು ಹಾಗೂ ಸಕ್ಕರೆ ಉದ್ಯಮದ ಸುಸ್ಥಿರ ಬೆಳವಣಿಗೆಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವುದು ಸಮಿತಿಯ ಪ್ರಮುಖ ಉದ್ದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕೆ ಬದ್ಧವಾಗಿದ್ದು, ರೈತರು ಮುಂದಿಟ್ಟಿರುವ ಬೇಡಿಕೆಗಳನ್ನು ಪರಿಶೀಲಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.