ದಾವಣಗೆರೆ: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಹಿಂದಿರುವವರು ಯಾರು ಎಂಬ ಸತ್ಯ ಹೊರಬರಬೇಕು. ಪ್ರಕರಣದ ಮೂಲ ಮತ್ತು ಇದರ ಹಿಂದೆ ಇರುವವರ ಬಗ್ಗೆ ಸಮಗ್ರ ತನಿಖೆ ನಡೆಸಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ವಿಚಾರ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಇದರ ಸತ್ಯಾಸತ್ಯತೆ ಜನರಿಗೆ ತಿಳಿಯಬೇಕಿದೆ. ಕೇವಲ ಆರೋಪ-ಪ್ರತ್ಯಾರೋಪಗಳಿಗೆ ಸೀಮಿತವಾಗದೆ, ಪ್ರಕರಣದ ಹಿಂದಿನ ಉದ್ದೇಶ ಮತ್ತು ಇದರ ಹಿಂದೆ ಇರುವವರನ್ನು ಪತ್ತೆಹಚ್ಚಲು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಹಿಂದೆ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದವರು ಇಲಾಖೆಗೆ ಅಗತ್ಯವಾದ ಗೌರವ ಮತ್ತು ನ್ಯಾಯ ಒದಗಿಸುವ ಬದಲು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಟೀಕೆ ಮಾಡುವುದರಲ್ಲೇ ಹೆಚ್ಚು ಕಾಲ ಕಳೆದಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬರದ ಪರಿಸ್ಥಿತಿ ತೀವ್ರವಾಗಿದ್ದು, ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ರೈತರ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ನಾಶವಾಗಿದ್ದು, ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ತೋಟಗಾರಿಕೆ ಬೆಳೆಗಳಿಗೆ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಮತ್ತು ಇತರೆ ಬೆಳೆಗಳಿಗೆ ಎಕರೆಗೆ 40 ಸಾವಿರ ರೂ. ಬೆಳೆ ಪರಿಹಾರ ನೀಡಬೇಕು. ಹಾನಿಗೊಳಗಾದ ಬೆಳೆಗಳಿಗೆ ತಕ್ಷಣ ಪರಿಹಾರ ಬಿಡುಗಡೆ ಮಾಡಿ, ಸಂಕಷ್ಟದಲ್ಲಿರುವ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವಾಗ ಸರ್ಕಾರ ಅವುಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು. ಸ್ಟಿಂಗ್ ಆಪರೇಷನ್ ಪ್ರಕರಣದ ಸತ್ಯವನ್ನು ಹೊರತರುವುದರ ಜತೆಗೆ, ಬರಪೀಡಿತ ಜನರು ಮತ್ತು ರೈತರ ಸಮಸ್ಯೆಗಳಿಗೂ ತುರ್ತಾಗಿ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.





















