ದಾವಣಗೆರೆ: ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿರುವ ‘ಸ್ಟಿಂಗ್ ಆಪರೇಷನ್’ ವಿವಾದಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರಿಗೆ ರಕ್ಷಣೆ ನೀಡುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ತಪ್ಪು ಮಾಡಿದವರು ಯಾರೇ ಆಗಿರಲಿ, ತಪ್ಪು ತಪ್ಪೇ. ಸಾರ್ವಜನಿಕ ಜೀವನದಲ್ಲಿರುವ ರಾಜಕಾರಣಿಗಳು ಸಮಾಜಕ್ಕೆ ಆದರ್ಶಪ್ರಾಯರಾಗಿ ನಡೆದುಕೊಳ್ಳಬೇಕೇ ಹೊರತು, ಕೆಟ್ಟ ನಡವಳಿಕೆ ಮೂಲಕ ಜನರ ವಿಶ್ವಾಸ ಕಳೆದುಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.
ರಾಜಕಾರಣ ಮಾಡುವವರು ಜನರಿಗೆ ಮಾದರಿಯಾಗಿರಬೇಕು. ಸಮಾಜದಲ್ಲಿ ಗೌರವಯುತವಾಗಿ ನಡೆದುಕೊಳ್ಳುವುದು ಹಾಗೂ ಕೀಳುಮಟ್ಟದ ರಾಜಕಾರಣದಿಂದ ದೂರವಿರುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯವಾಗಿದೆ. ಇಂತಹ ಹೀನ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗಿರಲಿ ಅಥವಾ ತಾವೇ ಆಗಿರಲಿ, ಪ್ರತಿಯೊಬ್ಬರೂ ಸಂವಿಧಾನದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕ ಹಿತಾಸಕ್ತಿ ಕಾಪಾಡುವುದು ಎಲ್ಲ ರಾಜಕಾರಣಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾಂಗ್ರೆಸ್ನ ಯಾರೂ ಮಾತನಾಡುತ್ತಿಲ್ಲ, ಅವರು ಏಕಾಂಗಿಯಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾರಜೋಳ, ಕಾಂಗ್ರೆಸ್ನಲ್ಲಿ ಅಧಿಕಾರದ ಆಸೆಯೇ ಹೆಚ್ಚಾಗಿದೆ ಎಂದು ಟೀಕಿಸಿದರು.
‘ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ’ ಎಂಬ ಗಾದೆಯಂತಾಗಿದೆ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ನಾಯಕರೊಂದಿಗೆ ತಮಗೆ ಯಾವುದೇ ಸಂಪರ್ಕವಿಲ್ಲದ ಕಾರಣ, ಆ ಪಕ್ಷದ ಆಂತರಿಕ ಬೆಳವಣಿಗೆಗಳ ಕುರಿತು ಹೆಚ್ಚಿನ ಮಾಹಿತಿ ಇಲ್ಲ ಎಂದರು.
ರಾಜ್ಯ ಸರ್ಕಾರದ ಆಡಳಿತ ವೈಖರಿಯನ್ನು ತೀವ್ರವಾಗಿ ಟೀಕಿಸಿದ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಆಡಳಿತದಲ್ಲಿ ಅರಾಜಕತೆ ಉಂಟಾಗಿದೆ ಎಂದು ಆರೋಪಿಸಿದರು.
ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರದಿಂದ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬರ ಪರಿಸ್ಥಿತಿಯ ಪರಿಶೀಲನೆ ನಡೆಸುವುದು, ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು ಹಾಗೂ ಆಡಳಿತ ವ್ಯವಸ್ಥೆಯನ್ನು ಎಚ್ಚರಿಸುವ ಜವಾಬ್ದಾರಿಯನ್ನು ವಿರೋಧ ಪಕ್ಷಗಳು ಸಮರ್ಥವಾಗಿ ನಿರ್ವಹಿಸುತ್ತಿವೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.





















