SK Home Ad
Home ಸುದ್ದಿ ದೇಶ ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಬೆಂಕಿ ಅವಘಡ: ದಟ್ಟ ಹೊಗೆ

ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಬೆಂಕಿ ಅವಘಡ: ದಟ್ಟ ಹೊಗೆ

0
47

ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖ ಆಡಳಿತ ಕೇಂದ್ರವಾಗಿರುವ ನವದೆಹಲಿಯ ಸೆಂಟ್ರಲ್ ವಿಸ್ಟಾ ವ್ಯಾಪ್ತಿಯ ಐತಿಹಾಸಿಕ ನಾರ್ತ್ ಬ್ಲಾಕ್ ಕಟ್ಟಡದಲ್ಲಿ ಸೋಮವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ 11.10ರ ಸುಮಾರಿಗೆ ನಾರ್ತ್ ಬ್ಲಾಕ್ ಕಟ್ಟಡದಿಂದ ಹೊಗೆ ಬರುತ್ತಿರುವ ಬಗ್ಗೆ ದೆಹಲಿ ಅಗ್ನಿಶಾಮಕ ಸೇವೆಗೆ ಕರೆ ಬಂದಿತ್ತು. ಕೂಡಲೇ ಆರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಕಟ್ಟಡದ ಮೇಲ್ಛಾವಣಿಯಿಂದ ದಟ್ಟ ಹೊಗೆ ಹೊರಬರುತ್ತಿರುವುದು ಕಂಡುಬಂದಿದ್ದು, ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಯಿತು.

ಎಸಿ ಬಾಯ್ಲರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಶಂಕೆ: ಕಟ್ಟಡದಲ್ಲಿ ದುರಸ್ತಿ ಹಾಗೂ ನವೀಕರಣ ಕಾಮಗಾರಿ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವೆಲ್ಡಿಂಗ್ ಕೆಲಸವೂ ನಡೆಯುತ್ತಿದ್ದು, ಮೇಲ್ಛಾವಣಿಯಲ್ಲಿದ್ದ ಹವಾನಿಯಂತ್ರಣ ವ್ಯವಸ್ಥೆಯ (ಎಸಿ) ಬಾಯ್ಲರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಅಗ್ನಿಶಾಮಕ ಇಲಾಖೆಯ ಪ್ರಕಾರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ.

ಘಟನೆಯಿಂದ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಬೆಂಕಿಯಿಂದ ಕಟ್ಟಡಕ್ಕೆ ಉಂಟಾಗಿರುವ ಹಾನಿಯ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಕೇಂದ್ರ ಸರ್ಕಾರದ ಪ್ರಮುಖ ಕಚೇರಿಗಳಿರುವ ಕಟ್ಟಡ: ನಾರ್ತ್ ಬ್ಲಾಕ್ ನವದೆಹಲಿಯ ರೈಸಿನಾ ಹಿಲ್ಸ್ ಪ್ರದೇಶದಲ್ಲಿರುವ ಐತಿಹಾಸಿಕ ಆಡಳಿತ ಕಟ್ಟಡವಾಗಿದೆ. ಕೇಂದ್ರ ಸಚಿವಾಲಯದ ಪ್ರಮುಖ ಕಚೇರಿಗಳು ಕಾರ್ಯನಿರ್ವಹಿಸುವ ಈ ಕಟ್ಟಡವು ದೇಶದ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಸ್ಥಾನ ಹೊಂದಿದೆ. ಕಟ್ಟಡದಿಂದ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಮೂಡಿತ್ತು.