ದಾವಣಗೆರೆ: ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಹಾಗೂ ಅರಾಜಕತೆ ಸೃಷ್ಟಿಸುವ ಪ್ರಯತ್ನಗಳ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಾರ್ಟಿ ವತಿಯಿಂದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿಯಾನದ ಅಂಗವಾಗಿ ನವೆಂಬರ್ 4ರಂದು ಚಿತ್ರದುರ್ಗದಲ್ಲಿ ಬೃಹತ್ ಪಾದಯಾತ್ರೆ ಆಯೋಜಿಸಲಾಗಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹರೀಶ್ ದ್ವಿವೇದಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯಲ್ಲಿ 10 ಸಾವಿರಕ್ಕೂ ಹೆಚ್ಚು ಯುವಕರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಪಾದಯಾತ್ರೆಯ ಜತೆಗೆ ರಾಜ್ಯದ ವಿವಿಧೆಡೆ ಪ್ರಬುದ್ಧರ ಸಂವಾದ ಹಾಗೂ ಯುವಜನರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನಿಕ ಮೌಲ್ಯಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಜನರಲ್ಲಿ ಅರಿವು ಮೂಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದನ್ನು ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿ ಸಹಿಸಿಕೊಳ್ಳುತ್ತಿಲ್ಲ. ಹತಾಶೆ ಮತ್ತು ನಿರಾಶೆಯಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಕಮ್ಯುನಿಸ್ಟ್ ಸಂಘಟನೆಗಳ ಸಹಕಾರದೊಂದಿಗೆ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇಂತಹ ಬೆಳವಣಿಗೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಂತ ಅಭಿಯಾನ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರ ಸಮಸ್ಯೆಗಳತ್ತ ಗಮನಹರಿಸಿ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ರೈತರಿಗೆ ಅನುಕೂಲವಾಗುವಂತಹ ಸೂಕ್ತ ನಿರ್ಧಾರಗಳನ್ನು ಕೈಗೊಂಡು ಕೃಷಿ ವಲಯದ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ನೂತನ ಎಂಎಲ್ ಸಿ ಕೆ.ಎಂ.ಸುರೇಶ್, ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ, ಲೋಕಿಕೆರೆ ನಾಗರಾಜ್, ಬಿಜೆಪಿ ಜಿಲ್ಲಾಧ್ಯಕ್ಷ ಮೆಳ್ಳೆಕಟ್ಟೆ ನಾಗರಾಜ್, ಮಾಜಿ ಅಧ್ಯಕ್ಷ ರಾಜಶೇಖರ ನಾಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಡ್ಲೆಬಾಳು ಧನಂಜಯ, ಆರ್.ಲಕ್ಷ್ಮಣ್, ತಾರಕೇಶ್ ನಾಯ್ಕ, ಅಣ್ಣೇಶ್ ಸೇರಿದಂತೆ ಇನ್ನಿತರರಿದ್ದರು.



















