ಬೆಂಗಳೂರು: ಅರ್ನಬ್ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮುರುಸು ಎಂಬ ಮತ್ತೊಂದು ಚಂಡಮಾರುತ ಉಂಟಾಗಿದ್ದು, ಇದರ ಪರಿಣಾಮ ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ.
ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ಮತ್ತು ರಾತ್ರಿ ವೇಳೆ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. ಚಂಡಮಾರುತದ ಪರಿಣಾಮ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು, ಕರ್ನಾಟಕದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.
ಮಧ್ಯರಾತ್ರಿ ವೇಳೆಗೆ ಆಂಧ್ರಪ್ರದೇಶದ ಕರಾವಳಿಯನ್ನು ಚಂಡಮಾರುತ ತಲುಪುವ ನಿರೀಕ್ಷೆಯಿದ್ದು, ಅದರ ವೇಗ ಗಂಟೆಗೆ 100 ಕಿ.ಮೀ. ದಾಟುವ ನಿರೀಕ್ಷೆ ಇರುವುದರಿಂದ ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಬಲವಾದ ಮೇಲೈ ಗಾಳಿ ಬೀಸಲಿದೆ.
ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಒಂದೆರೆಡು ಕಡೆ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಗಳಿವೆ.
ನ. 3 ಮತ್ತು 4 ರಂದು ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಹಲವೆಡೆ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಮತ್ತು ರಾತ್ರಿ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




















