SK Home Ad
Home ನಮ್ಮ ಜಿಲ್ಲೆ ಚಿಕ್ಕಮಗಳೂರು ಕಾಂಗ್ರೆಸ್ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್. ಅನಂತ್ ನಿಧನ

ಕಾಂಗ್ರೆಸ್ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್. ಅನಂತ್ ನಿಧನ

0
1
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ಎಸ್. ಅನಂತ್ ನಿಧನ; ರಾಜಕೀಯ ವಲಯದಲ್ಲಿ ಶೋಕ

ಮಾಜಿ ಸಚಿವೆ ಮೋಟಮ್ಮ ಅವರ ಅಣ್ಣನ ಮಗ ಎಂ.ಎಸ್. ಅನಂತ್ ಇನ್ನಿಲ್ಲ

ಚಿಕ್ಕಮಗಳೂರು: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಎಂ.ಎಸ್. ಅನಂತ್ (52) ಅವರು ಅನಾರೋಗ್ಯದಿಂದ ಬುಧವಾರ ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಮಾಜಿ ಸಚಿವೆ ಮೋಟಮ್ಮ ಅವರ ಅಣ್ಣನ ಮಗನಾಗಿದ್ದ ಅನಂತ್ ಅವರು ಇಂಜಿನಿಯರಿಂಗ್ ಪದವೀಧರರಾಗಿದ್ದರು. ಪದವಿ ಪೂರ್ಣಗೊಳಿಸಿದ ಬಳಿಕ ರಾಜಕೀಯ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೂಡಿಗೆರೆ ಕಸಬಾ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಜಿಲ್ಲಾ ವಕ್ತಾರ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಲ್ಲದೆ, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು.

ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಗುರುತಿಸಿಕೊಂಡಿದ್ದ ಅವರ ನಿಧನಕ್ಕೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.