SK Home Ad
Home ನಮ್ಮ ಜಿಲ್ಲೆ ಕೊಪ್ಪಳ ಬಿಜೆಪಿಗರಿಗೆ ಜನರ ಕಾಳಜಿ ಇದ್ದರೆ ಮೋದಿ ಬಳಿ ಹೋಗಿ ಬರ ಪರಿಹಾರ ಕೇಳಲಿ

ಬಿಜೆಪಿಗರಿಗೆ ಜನರ ಕಾಳಜಿ ಇದ್ದರೆ ಮೋದಿ ಬಳಿ ಹೋಗಿ ಬರ ಪರಿಹಾರ ಕೇಳಲಿ

0
6

ಕೊಪ್ಪಳ: ಬಿಜೆಪಿ ನಾಯಕರಿಗೆ ನಿಜವಾಗಿಯೂ ಜನರ ಬಗ್ಗೆ ಕಾಳಜಿ, ಮಾನ, ಮರ್ಯಾದೆ ಮತ್ತು ಗೌರವ ಇದ್ದರೆ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯ ಸರಕಾರಕ್ಕೆ ಬರಗಾಲಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಡ ಹಾಕಬೇಕು. ಪೆಟ್ರೋಲ್, ಡೀಸೆಲ್ ಬೆಲೆ ಹಾಗೂ ಜಿಎಸ್‌ಟಿ ದರ ಕಡಿತಕ್ಕೆ ಒತ್ತಾಯಿಸಲಿ. ಇಂಧನ ಬೆಲೆ ಕಡಿಮೆಯಾದರೆ ಸಾರಿಗೆ ವೆಚ್ಚ ತಗ್ಗಿ, ಅಗತ್ಯ ವಸ್ತುಗಳ ಬೆಲೆಯೂ ನಿಯಂತ್ರಣಕ್ಕೆ ಬರಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಕುಷ್ಟಗಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚಾಗಿ ಅಗತ್ಯ ವಸ್ತುಗಳ ಬೆಲೆಯ ಮೇಲೂ ಪರಿಣಾಮ ಬೀರುತ್ತದೆ. ಇದಕ್ಕೆ ರಾಜ್ಯ ಸರ್ಕಾರವನ್ನು ಹೊಣೆ ಮಾಡುವುದು ಸರಿಯಲ್ಲ. ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ನೀತಿಗಳೇ ಪ್ರಮುಖ ಕಾರಣವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಸಾರಿಗೆ ವ್ಯವಸ್ಥೆಯ ವೆಚ್ಚ ಹೆಚ್ಚಾಗುತ್ತದೆ. ಇದರ ಪರಿಣಾಮವಾಗಿ ದಿನನಿತ್ಯ ಬಳಕೆಯ ವಸ್ತುಗಳ ಬೆಲೆಯೂ ಸಹಜವಾಗಿಯೇ ಏರಿಕೆಯಾಗುತ್ತದೆ. ಈ ಸಾಮಾನ್ಯ ಸಂಗತಿ ಬಿಜೆಪಿಯವರಿಗೆ ಅರ್ಥವಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ಸಾರಿಗೆ ವ್ಯವಸ್ಥೆಯ ಮೇಲೆ ಅವಲಂಬಿತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಇಂಧನ ಬೆಲೆ ಏರಿಕೆಯಾದರೆ ಜನಸಾಮಾನ್ಯರ ಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ. ಸಣ್ಣಪುಟ್ಟ ಸಮಸ್ಯೆಗಳು ಆಡಳಿತ ವ್ಯವಸ್ಥೆಯಲ್ಲಿ ಸಹಜವಾಗಿದ್ದು, ಅವುಗಳನ್ನು ಸರಿಪಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

ಬಿಜೆಪಿ ಆಡಳಿತದ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಎಷ್ಟಿತ್ತು ಎಂಬುದನ್ನು ಮೊದಲು ನೆನಪಿಸಿಕೊಳ್ಳಬೇಕು. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿಯೂ ಬೆಲೆ ಏರಿಕೆ ನಡೆದಿತ್ತು ಎಂಬ ಬಿಜೆಪಿ ಆರೋಪಕ್ಕೆ ಪ್ರತಿಯಾಗಿ, ಬಿಜೆಪಿ ಆಡಳಿತದಲ್ಲಿ ಇಂಧನ ಮತ್ತು ಗ್ಯಾಸ್ ಸಿಲಿಂಡರ್ ಬೆಲೆಗಳು ಎಷ್ಟು ಹೆಚ್ಚಾಗಿವೆ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.

ಡೀಸೆಲ್ ಬೆಲೆ ಏರಿಕೆಯಾದರೆ ಸಾರಿಗೆ ವೆಚ್ಚ ಹೆಚ್ಚಾಗುವುದು ಸಾಮಾನ್ಯ ಪ್ರಕ್ರಿಯೆ. ಅದರ ಪರಿಣಾಮ ಕೃಷಿ ಉತ್ಪನ್ನಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯ ಮೇಲೂ ಬೀರುತ್ತದೆ. ಇದಕ್ಕೆ ರಾಜ್ಯ ಸರ್ಕಾರವನ್ನು ದೂಷಿಸುವ ಬದಲು ಕೇಂದ್ರ ಸರ್ಕಾರದ ಬೆಲೆ ನೀತಿಗಳ ಬಗ್ಗೆ ಬಿಜೆಪಿ ನಾಯಕರು ಪ್ರಶ್ನಿಸಬೇಕು ಎಂದರು.

ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ರೈತರ ಖಾತೆಗಳಿಗೆ ಡಿಬಿಟಿ ಮೂಲಕ 2,500 ರೂ. ಹಣ ವರ್ಗಾವಣೆ ಮಾಡಿದ್ದಾರೆ. ಇದೀಗ ಮತ್ತೆ 2,500 ರೂ. ಪರಿಹಾರ ನೀಡಲು ಅನುದಾನಕ್ಕೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದರು. ಈ ಮೂಲಕ ಅರ್ಹ ರೈತರಿಗೆ ಒಟ್ಟು 5,000 ರೂ. ಬರ ಪರಿಹಾರ ಒದಗಿಸುವ ಉದ್ದೇಶ ಹೊಂದಲಾಗಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದರು.

ಬರಗಾಲದಿಂದ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರದಿಂದಲೂ ಸೂಕ್ತ ಪರಿಹಾರ ದೊರೆಯಬೇಕಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ತಕ್ಷಣ ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿಯ ಗಂಭೀರತೆಯನ್ನು ಮನವರಿಕೆ ಮಾಡಿಕೊಡಬೇಕು. ರೈತರಿಗೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಬೇಕು ಎಂದು ಆಗ್ರಹಿಸಿದರು.