ಮಂಗಳೂರು: ರಾಜಧಾನಿ ಬೆಂಗಳೂರನ್ನು ಕರಾವಳಿಯ ಮಂಗಳೂರು, ಉಡುಪಿ, ಕಾರವಾರ ಮೂಲಕ ಗೋವಾದ ಮಡಗಾಂವ್ನೊಂದಿಗೆ ಸಂಪರ್ಕಿಸುವ ಬಹುನಿರೀಕ್ಷಿತ ‘ವಂದೇ ಭಾರತ್’ ಎಕ್ಸ್ಪ್ರೆಸ್ ರೈಲು ಸೇವೆಗೆ ಕೇಂದ್ರ ರೈಲ್ವೆ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿಂದು ಸಾಂಕೇತಿಕವಾಗಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳನ್ನು ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಗಾಗಿ 94 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ ಎಂದು ಅವರು ತಿಳಿಸಿದರು.
ರೈಲ್ವೆ ಸಂಪರ್ಕ, ಮೂಲಸೌಕರ್ಯ ಮತ್ತು ಪ್ರಯಾಣಿಕರ ಸೌಲಭ್ಯಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಆದ್ಯತೆ ನೀಡುತ್ತಿದ್ದು, ಕರಾವಳಿ ಭಾಗದ ರೈಲ್ವೆ ವ್ಯವಸ್ಥೆಯನ್ನು ಮತ್ತಷ್ಟು ಉನ್ನತೀಕರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಮಂಗಳೂರು–ಬೆಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಬಹುಕಾಲದ ಕನಸಾಗಿತ್ತು. ಕಾಮಗಾರಿ ಅನುಷ್ಠಾನದ ವೇಳೆ ಹಲವು ಸವಾಲುಗಳು ಎದುರಾದರೂ ಎಲ್ಲ ಅಡೆತಡೆಗಳನ್ನು ಯಶಸ್ವಿಯಾಗಿ ನಿವಾರಿಸಿ ಇಂದು ವಿದ್ಯುದೀಕೃತ ರೈಲು ಸಂಚಾರ ಆರಂಭಿಸಿರುವುದು ಸಂತಸದ ವಿಚಾರ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.




















