SK Home Ad
Home ನಮ್ಮ ಜಿಲ್ಲೆ ಮೈಸೂರು ಮೇಕೆದಾಟು ಯೋಜನೆಗೆ ಅನುಮತಿ ನೀಡಿ, ಕಸ್ತೂರಿರಂಗನ್ ವರದಿ ಹಿಂಪಡೆಯಿರಿ: ಮೋದಿಗೆ ಡಿಕೆಶಿ ಮನವಿ

ಮೇಕೆದಾಟು ಯೋಜನೆಗೆ ಅನುಮತಿ ನೀಡಿ, ಕಸ್ತೂರಿರಂಗನ್ ವರದಿ ಹಿಂಪಡೆಯಿರಿ: ಮೋದಿಗೆ ಡಿಕೆಶಿ ಮನವಿ

0
5

ಮೈಸೂರು: ಮೇಕೆದಾಟು ಜಲಾಶಯ ಯೋಜನೆಗೆ ಅಗತ್ಯ ಅನುಮತಿ ನೀಡುವುದು, ಕಸ್ತೂರಿರಂಗನ್ ವರದಿಯ ಶಿಫಾರಸುಗಳನ್ನು ಹಿಂಪಡೆಯುವುದು ಹಾಗೂ ರಾಜ್ಯದ 1,000 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು ಸಿಎಸ್‌ಆರ್ ನಿಧಿ ಬಳಕೆಗೆ ಅವಕಾಶ ನೀಡುವುದು ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿಟ್ಟಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ನಡೆದ ಕಾಸ್ಮೋಸ್ ತಾರಾಲಯ ಹಾಗೂ ಭಾರತ ವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರ ಅಗತ್ಯ ಎಂದರು.

ಮೇಕೆದಾಟು ಯೋಜನೆಗೆ ಅನುಮತಿ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕದ ಪರವಾಗಿ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಮಹತ್ವದ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ವಿಳಂಬ ಮಾಡದೆ ಅಂತಿಮ ಶಾಸನಬದ್ಧ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.

ಕಸ್ತೂರಿರಂಗನ್ ವರದಿ ಹಿಂಪಡೆಯಿರಿ: ರಾಜ್ಯ ವಿಧಾನಮಂಡಲವು ವರದಿಯ ಶಿಫಾರಸುಗಳ ವಿರುದ್ಧ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ಸ್ಥಳೀಯ ಜನರ ಬದುಕು ಮತ್ತು ಜೀವನೋಪಾಯಕ್ಕೆ ಧಕ್ಕೆಯಾಗದಂತೆ ವರದಿಯ ಶಿಫಾರಸುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

1 ಸಾವಿರ ಶಾಲೆಗಳ ಉನ್ನತೀಕರಣ: ಸಿಎಸ್‌ಆರ್ ಯೋಜನೆಗಳನ್ನು ಕರ್ನಾಟಕದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಅನುಷ್ಠಾನಗೊಳಿಸಲು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಸಲಹಾ ಸೂಚನೆ ಹೊರಡಿಸಬೇಕು. ಇದರಿಂದ 1,000 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು ಹಾಗೂ ಗ್ರಾಮೀಣ ಶಿಕ್ಷಣ ವ್ಯವಸ್ಥೆ ಬಲಪಡಿಸಲು ಅನುಕೂಲವಾಗಲಿದೆ ಎಂದರು.

ಇದೇ ವೇಳೆ ಕರ್ನಾಟಕದ ಬಾಹ್ಯಾಕಾಶ ಮತ್ತು ವಿಜ್ಞಾನ ಕ್ಷೇತ್ರದ ಸಾಧನೆಗಳನ್ನು ಪ್ರಸ್ತಾಪಿಸಿದ ಅವರು, ಶಿವಮೊಗ್ಗ, ರಾಯಚೂರು, ಯಾದಗಿರಿ ಹಾಗೂ ಚಿಕ್ಕಮಗಳೂರಿನಲ್ಲಿ ₹59 ಕೋಟಿ ವೆಚ್ಚದಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ದೊಡ್ಡಬಳ್ಳಾಪುರದ ಹೊಸಹಳ್ಳಿಯಲ್ಲಿ ₹230 ಕೋಟಿ ವೆಚ್ಚದಲ್ಲಿ ಬೆಂಗಳೂರು ಸೈನ್ಸ್ ಸಿಟಿ ನಿರ್ಮಿಸುವ ಯೋಜನೆಯಿದೆ ಎಂದು ತಿಳಿಸಿದರು.

ಧಾರವಾಡ, ಮಡಿಕೇರಿ, ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿಯೂ ತಾರಾಲಯಗಳು ನಿರ್ಮಾಣವಾಗುತ್ತಿವೆ. ಉತ್ತರ ಕರ್ನಾಟಕದಲ್ಲಿಯೂ ಕಾಸ್ಮೋಸ್ ಮಾದರಿಯ ವಿಜ್ಞಾನ ಮತ್ತು ತಾರಾಲಯ ಸೌಲಭ್ಯ ಕಲ್ಪಿಸುವ ಸಾಧ್ಯತೆ ಪರಿಶೀಲಿಸುವಂತೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಸೂಚಿಸುವುದಾಗಿ ಹೇಳಿದರು.

ಮಿಯಾವಾಕಿ ಪದ್ಧತಿಯಲ್ಲಿ ಅಭಿವೃದ್ಧಿಪಡಿಸಿರುವ ಭಾರತ ವನ ಮೈಸೂರನ್ನು ಹಸಿರುಮಯ ಹಾಗೂ ಸುಸ್ಥಿರ ನಗರವನ್ನಾಗಿ ರೂಪಿಸಲು ನೆರವಾಗಲಿದೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಹಸಿರು ಪರಿಸರದ ಜತೆಗೆ ವೈಜ್ಞಾನಿಕ ಚಿಂತನೆಯ ಯುವ ಪೀಳಿಗೆಯೂ ಅಗತ್ಯ ಎಂದು ಹೇಳಿದರು.