ಅಸ್ಸಾಂನ ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪದ ರೊಂಗಾಜನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವಿನ ಸಂಖ್ಯೆ 26ಕ್ಕೆ ಏರಿಕೆಯಾಗಿದ್ದು, 11ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೊಕಾಖಾಟ್ನಿಂದ ನಾಗಾಂವ್ ಕಡೆಗೆ ಸಂಚರಿಸುತ್ತಿದ್ದ ಮಿನಿಬಸ್ ಹಾಗೂ ಎದುರಿನಿಂದ ವೇಗವಾಗಿ ಬಂದ ಕಂಟೇನರ್ ಟ್ರಕ್ ನಡುವೆ ರಾಷ್ಟ್ರೀಯ ಹೆದ್ದಾರಿ-715ರ ಹಾಥಿಕುಲಿ ಚಹಾ ಎಸ್ಟೇಟ್ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ದುರಂತದ ವೇಳೆ ಮಿನಿಬಸ್ನಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 35ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಅಪಘಾತದ ಭೀಕರತೆಗೆ ಮಿನಿಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ತಕ್ಷಣವೇ 9 ಆಂಬ್ಯುಲೆನ್ಸ್ಗಳ ಮೂಲಕ ಕೊಹೊರಾ ಮಾದರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೊಕಾಖಾಟ್ ಮತ್ತು ಜೋರ್ಹತ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರ ಪೈಕಿ ಮಿನಿಬಸ್ ಚಾಲಕ ಅಬ್ದುಲ್ ಮುಜಿದ್, ಕ್ಲೀನರ್ ಸುಭಾಷ್, 12 ವರ್ಷದ ಬಾಲಕ ಅನುರಾಗ್ ಗೋವಾಲಾ ಸೇರಿದಂತೆ ಎಂಟು ಮಂದಿಯ ಗುರುತು ಪತ್ತೆಯಾಗಿದೆ. ಗೋಲಾಘಾಟ್ನ ಸಿವಿಲ್ ಆಸ್ಪತ್ರೆಯಲ್ಲಿ ವಿಶೇಷ ಬೆಳಕಿನ ವ್ಯವಸ್ಥೆಯಡಿ ರಾತ್ರಿಯೇ ಮರಣೋತ್ತರ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
ಕಾಜಿರಂಗ ಉದ್ಯಾನವನ ವ್ಯಾಪ್ತಿಯಲ್ಲಿ ವೇಗದ ಮಿತಿ ನಿಯಮ ಜಾರಿಯಲ್ಲಿದ್ದರೂ ಮಿನಿಬಸ್ ಅತಿವೇಗದಲ್ಲಿ ಚಲಿಸುತ್ತಿತ್ತು ಮತ್ತು ಆಸನ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಲದೆ ಅಪಘಾತಕ್ಕೀಡಾದ ಈ ವಾಹನದ ಮೇಲೆ ಈ ಹಿಂದೆಯೂ ಅತಿವೇಗದ ಚಾಲನೆಗಾಗಿ ಹಲವು ದಂಡ ಪ್ರಕರಣಗಳು ದಾಖಲಾಗಿದ್ದವು ಎಂಬ ಮಾಹಿತಿ ಹೊರಬಿದ್ದಿದೆ. ಘಟನೆ ಕುರಿತು ಸಮಗ್ರ ತನಿಖೆಗೆ ಆದೇಶಿಸಲಾಗಿದೆ.
ದುರ್ಘಟನೆಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಸಚಿವ ಅತುಲ್ ಬೋರಾ ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.




















