SK Home Ad
Home ನಮ್ಮ ಜಿಲ್ಲೆ ಚಿಕ್ಕಮಗಳೂರು ಸಿನಿಮೀಯ ಶೈಲಿಯಲ್ಲಿ ದರೋಡೆ: ಐವರು ಅಂದರ್‌, ಮೂವರು ಎಸ್ಕೇಪ್‌!

ಸಿನಿಮೀಯ ಶೈಲಿಯಲ್ಲಿ ದರೋಡೆ: ಐವರು ಅಂದರ್‌, ಮೂವರು ಎಸ್ಕೇಪ್‌!

0
39

ಕಡೂರು: ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮೀಯ ರೀತಿಯಲ್ಲಿ ಅಡಿಕೆ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 58 ಲಕ್ಷ ರೂ. ದರೋಡೆ ಮಾಡಿದ್ದ ಪ್ರಕರಣ ಭೇದಿಸಿರುವ ಕಡೂರು ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನ. 7ರ ಮಧ್ಯರಾತ್ರಿ ಬೀರೂರು ಮೂಲದ ಅಡಿಕೆ ವ್ಯಾಪಾರಿ ತೌಫಿಕ್ ಅವರು ಫಾರ್ಚುನರ್ ಕಾರಿನಲ್ಲಿ ಬೆಂಗಳೂರಿನಿಂದ ಬರುತ್ತಿದ್ದಾಗ ಕಡೂರು ಪಟ್ಟಣದ ಹೊರವಲಯದಲ್ಲಿ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ 58 ಲಕ್ಷ ಹಣ ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಕಡೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಭದ್ರಾವತಿಯಲ್ಲಿ ಅಡಗಿದ್ದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ತೌಫಿಕ್ ಅವರ ಬಳಿ ಕೆಲಸ ಮಾಡುತ್ತಿದ್ದ ಇರ್ಫಾನ್ ಎಂಬಾತ ಕೆಲಸ ಬಿಟ್ಟ ಬಳಿಕ ದರೋಡೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ.

ಈ ಸಂಬಂಧ ಇರ್ಫಾನ್ ಹಾಗೂ ಗೌಸ್ ಸೇರಿದಂತೆ ಐವರು ಆರೋಪಿ ಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ 30 ಲಕ್ಷ ರೂ. ವಶಪಡಿಸಿ ಕೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.