SK Home Ad
Home ನಮ್ಮ ಜಿಲ್ಲೆ ಬೆಂಗಳೂರು ಬಿಜೆಪಿ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆ ಜಾರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆ ಜಾರಿ

0
56

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ. ಯೋಜನೆ ನಿಜವಾಗಿಯೂ ಜಾರಿಯಾಗಬೇಕಾದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಹಾಗೂ ಅಲ್ಲಿನ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕರ್ನಾಟಕದ ಕಾಂಗ್ರೆಸ್ ನಾಯಕರು ಮಾತ್ರ ಯೋಜನೆ ಜಾರಿ ಮಾಡುವುದಾಗಿ ಹೇಳುತ್ತಾ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು.

ಚುನಾವಣೆಯಲ್ಲಿ ಮತ ಪಡೆಯಲು ಒಂದು ರೀತಿಯ ಹೇಳಿಕೆ ನೀಡುವ ಕಾಂಗ್ರೆಸ್ ನಾಯಕರು, ಅಧಿಕಾರದಲ್ಲಿರುವಾಗ ಮತ್ತೊಂದು ರೀತಿಯ ನಿಲುವು ತಾಳುತ್ತಿದ್ದಾರೆ. ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷರೇ ಮೇಕೆದಾಟು ಯೋಜನೆಯನ್ನು ಕಾನೂನುಬಾಹಿರ ಎಂದು ಕರೆದಿದ್ದಾರೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ತಮ್ಮ ನಿಲುವು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು.

ಅಂಡಮಾನ್‌ಗೆ ತೆರಳಿ ಮರಗಳನ್ನು ತಬ್ಬಿಕೊಳ್ಳುವ ರಾಹುಲ್ ಗಾಂಧಿ ಅವರು ಮೇಕೆದಾಟು ಯೋಜನೆಯನ್ನೂ ಒಮ್ಮೆ ತಬ್ಬಿಕೊಳ್ಳಲಿ ಎಂದು ವ್ಯಂಗ್ಯವಾಡಿದ ಅಶೋಕ್, ಕಾಂಗ್ರೆಸ್ ಪಕ್ಷ ಯೋಜನೆಯ ವಿಚಾರದಲ್ಲಿ ರಾಜ್ಯದ ಜನರಿಗೆ ದ್ರೋಹ ಬಗೆಯುತ್ತಿದೆ. ಹಳೇ ಮೈಸೂರು ಭಾಗದ ಜನರು ಇದನ್ನು ಸಹಿಸುವುದಿಲ್ಲ. ಮುಂದಿನ ದಿನಗಳಲ್ಲಿ ಜನರೇ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವಿನ ಬಗ್ಗೆಯೂ ಮಾತನಾಡಿದ ಅವರು, ಅರಣ್ಯ ಪ್ರದೇಶದ ನಾಶವಾಗುವ ಆತಂಕದಿಂದ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ರಾಜ್ಯ ಸರ್ಕಾರ ಅಗತ್ಯ ದಾಖಲೆಗಳು ಹಾಗೂ ಸಮರ್ಪಕ ಮಾಹಿತಿಯನ್ನು ಸಲ್ಲಿಸಿ, ಯೋಜನೆಗೆ ಅರಣ್ಯ ಭೂಮಿ ಒದಗಿಸುವಂತೆ ಕೇಂದ್ರವನ್ನು ಮನವೊಲಿಸಬೇಕು ಎಂದು ಹೇಳಿದರು.

ಕೇಂದ್ರದೊಂದಿಗೆ ಸೂಕ್ತ ರೀತಿಯಲ್ಲಿ ಸಮನ್ವಯ ಸಾಧಿಸುವ ಬದಲು ಕಾಂಗ್ರೆಸ್ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ. ಮೇಕೆದಾಟು ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಆರ್. ಅಶೋಕ್ ಆಗ್ರಹಿಸಿದರು.