SK Home Ad
Home ನಮ್ಮ ಜಿಲ್ಲೆ ದಾವಣಗೆರೆ ದಾವಣಗೆರೆ-ಚಿತ್ರದುರ್ಗಕ್ಕೆ ಪ್ರತ್ಯೇಕ ಹಾಲು ಒಕ್ಕೂಟ: ಶೀಘ್ರವೇ ಭೂಮಿಪೂಜೆ

ದಾವಣಗೆರೆ-ಚಿತ್ರದುರ್ಗಕ್ಕೆ ಪ್ರತ್ಯೇಕ ಹಾಲು ಒಕ್ಕೂಟ: ಶೀಘ್ರವೇ ಭೂಮಿಪೂಜೆ

0
65

ದಾವಣಗೆರೆ: ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ರೈತರ ಹಿತದೃಷ್ಟಿಯಿಂದ ತಾಲೂಕಿನ ಎಚ್. ಕಲ್ಪನಹಳ್ಳಿ ಗ್ರಾಮದ ಸಮೀಪ ₹280 ಕೋಟಿ ವೆಚ್ಚದಲ್ಲಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಹಾಲು ಒಕ್ಕೂಟ ಕೇಂದ್ರ ನಿರ್ಮಾಣಕ್ಕೆ ಶೀಘ್ರದಲ್ಲೇ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ತಿಳಿಸಿದರು.

ತಾಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಗುಡಾಳು ಗ್ರಾಮದಲ್ಲಿ ಸೋಮವಾರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳ ರೈತರ ಅನುಕೂಲಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ತಾವು ಸರ್ಕಾರದ ಮೇಲೆ ಒತ್ತಡ ಹೇರಿದ್ದರ ಫಲವಾಗಿ, ಎಚ್. ಕಲ್ಪನಹಳ್ಳಿ ಬಳಿ ಶಿವಮೊಗ್ಗ ಹಾಲು ಒಕ್ಕೂಟದ ಮಾದರಿಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಕೇಂದ್ರ ನಿರ್ಮಾಣಕ್ಕೆ ಸರ್ಕಾರ ₹280 ಕೋಟಿ ಮಂಜೂರು ಮಾಡಿದೆ. ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಹಕಾರ ಸಚಿವರು ಹಾಗೂ ತಾವು ಭೂಮಿಪೂಜೆ ನೆರವೇರಿಸಲಿದ್ದೇವೆ. ಇದರಿಂದ ಎರಡೂ ಜಿಲ್ಲೆಗಳ ಹಾಲು ಉತ್ಪಾದಕ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಸಹಕಾರ ಸಂಘಗಳು ರೈತರ ಆರ್ಥಿಕ ಸಂಕಷ್ಟ ನಿವಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಸಾಮಾನ್ಯ ಹಾಗೂ ಸಣ್ಣ ರೈತರಿಗೆ ಅಗತ್ಯ ಸಂದರ್ಭದಲ್ಲಿ ಸಾಲ ಸೌಲಭ್ಯ ಕಲ್ಪಿಸಿ, ಕೃಷಿ ಚಟುವಟಿಕೆಗಳಿಗೆ ನೆರವಾಗುತ್ತಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ಯಶಸ್ಸಿನಲ್ಲಿ ಮಹಿಳೆಯರು ಮತ್ತು ತಾಯಂದಿರ ಕೊಡುಗೆ ಅಪಾರವಾಗಿದೆ. ಬೆಳಗ್ಗೆಯಿಂದಲೇ ಶ್ರಮಿಸಿ ಹಾಲು ಸಂಗ್ರಹಿಸಿ ಸಂಘಗಳಿಗೆ ತಲುಪಿಸುವ ಮೂಲಕ ಸಂಘಗಳ ಬೆಳವಣಿಗೆಗೆ ಕಾರಣರಾಗಿದ್ದಾರೆ. ಇಂತಹ ಸಂಘಗಳು ರೈತರು ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಇನ್ನಷ್ಟು ಒತ್ತು ನೀಡಬೇಕು ಎಂದು ಹೇಳಿದರು.

ಈಗಾಗಲೇ ಕೊಳವೆಬಾವಿ ಕೊರೆಸಿ ಕೃಷಿ ಮಾಡುತ್ತಿರುವ ಹಾಗೂ ಅಡಿಕೆ ತೋಟ ಬೆಳೆಸಿರುವ ರೈತರು ಸಾಲ ಮರುಪಾವತಿಸಲು ಕಷ್ಟಪಡುತ್ತಿದ್ದಾರೆ. ಹೀಗಾಗಿ ಸಹಕಾರ ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಈಗಾಗಲೇ ಸಾಲದ ಮಿತಿಯನ್ನು ₹3 ಲಕ್ಷದಿಂದ ₹5 ಲಕ್ಷದವರೆಗೆ ಹೆಚ್ಚಿಸಿದ್ದು, ಈ ಸೌಲಭ್ಯವನ್ನು ಶೀಘ್ರ ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಇರುವುದರಿಂದ ಈ ವರ್ಷ ರೈತರಿಂದ ಯಾವುದೇ ಸಾಲ ವಸೂಲಾತಿ ಮಾಡಬಾರದು. ಖಾಸಗಿ ಹಣಕಾಸು ಸಂಸ್ಥೆಗಳು ಹಾಗೂ ಮೈಕ್ರೋಫೈನಾನ್ಸ್ ಕಂಪನಿಗಳು ಸಹ ಸಾಲ ಮರುಪಾವತಿಗೆ ಒತ್ತಡ ಹೇರಬಾರದು. ಸಾಲ ಮರುಪಾವತಿ ಅನಿವಾರ್ಯವಾದರೂ ಅಸಲು ಮೊತ್ತಕ್ಕೆ ಮಾತ್ರ ಸೀಮಿತಗೊಳಿಸಿ, ದುಪ್ಪಟ್ಟು ಬಡ್ಡಿ ಅಥವಾ ದಂಡ ಬಡ್ಡಿ ವಿಧಿಸಬಾರದು ಎಂದು ಒತ್ತಾಯಿಸಿದರು.

ಗುಡಾಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಮೂರು-ನಾಲ್ಕು ಕೊಳವೆಬಾವಿಗಳನ್ನು ಕೊರೆಸಿ ನೀರು ಪೂರೈಸುವ ವ್ಯವಸ್ಥೆ ಮಾಡಬೇಕು. ಈ ಕುರಿತು ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುಡಾಳು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜಿ.ಕೆ. ಕಲ್ಲೇಶಪ್ಪ ವಹಿಸಿದ್ದರು. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಜೆ.ಆರ್. ಷಣ್ಮುಖಪ್ಪ, ನಿರ್ದೇಶಕರಾದ ಎಚ್.ಕೆ. ಬಸವಬಸಪ್ಪ, ಜೆ.ಎಸ್. ವೇಣುಗೋಪಾಲರೆಡ್ಡಿ, ಬಿ.ಶೇಖರಪ್ಪ, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಸಿರಿಗೆರೆ ರಾಜಣ್ಣ, ನಿರ್ದೇಶಕ ಕೆ.ಜಿ. ಸುರೇಶ್, ಶಿವಮೊಗ್ಗ-ದಾವಣಗೆರೆ-ಚಿತ್ರದುರ್ಗ ಹಾಲು ಒಕ್ಕೂಟದ ಉಪಾಧ್ಯಕ್ಷ ಚೇತನ್ ಎಸ್. ನಾಡಿಗರ, ಎಚ್.ಬಿ. ಭೂಮೇಶ್ವರಪ್ಪ ಸೇರಿದಂತೆ ಇತರರಿದ್ದರು.