ಬೆಂಗಳೂರು: ಖಾಸಗಿ ಶಾಲೆಗಳ ದುಬಾರಿ ಶುಲ್ಕದಿಂದ ಬೇಸತ್ತ ಪೋಷಕರು ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿರುವ ಬೆನ್ನಲ್ಲೇ, ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲೂ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಈಗಾಗಲೇ ಸುಮಾರು 7 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ತರಗತಿಗಳು ಕಾರ್ಯನಿರ್ವಹಿಸುತ್ತಿದ್ದು, ಬೇಡಿಕೆ ಹೆಚ್ಚಿರುವ ಶಾಲೆಗಳನ್ನು ಗುರುತಿಸಲು ಸಮೀಕ್ಷೆ ಆರಂಭಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಧಿಯಡಿ ಆರಂಭಿಸಲಾದ ತರಗತಿಗಳಿಗೆ ಕೇವಲ 42 ದಿನಗಳಲ್ಲಿ 48 ಸಾವಿರ ಮಕ್ಕಳು ದಾಖಲಾಗಿರುವುದು ಗಮನಾರ್ಹ.
ರಾಜ್ಯದ ಇತರ ಭಾಗಗಳಲ್ಲೂ ಎಲ್ಕೆಜಿ, ಯುಕೆಜಿ ಆರಂಭಿಸುವಂತೆ ಪೋಷಕರಿಂದ ಬೇಡಿಕೆ ಹೆಚ್ಚುತ್ತಿದೆ. ಕೆಲವು ಶಾಲೆಗಳಲ್ಲಿ ಅಧಿಕೃತ ಅನುಮತಿ ಇಲ್ಲದಿದ್ದರೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು (ಎಸ್ಡಿಎಂಸಿ) ಹಾಗೂ ಶಿಕ್ಷಕರು ಸ್ವಂತ ವೆಚ್ಚದಲ್ಲಿ ತರಗತಿಗಳನ್ನು ಆರಂಭಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಕ್ಕಳ ದಾಖಲಾತಿ ಪ್ರಮಾಣ, ಶಾಲೆಗಳಲ್ಲಿನ ಕೊಠಡಿ ಸೇರಿದಂತೆ ಮೂಲಸೌಕರ್ಯಗಳ ಲಭ್ಯತೆ ಹಾಗೂ ಎಸ್ಡಿಎಂಸಿಗಳ ಬೇಡಿಕೆಯನ್ನು ಆಧರಿಸಿ ಹೊಸ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಇಲಾಖೆ ಮುಂದಾಗಿದೆ.
ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳ ನಡುವೆ ಸಮನ್ವಯ ಸಾಧಿಸುವುದೂ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಆರಂಭಿಕ ಹಂತದಲ್ಲೇ ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ದಾಖಲಾತಿ ಹೆಚ್ಚಿಸುವ ನಿರೀಕ್ಷೆಯನ್ನು ಸರ್ಕಾರ ಹೊಂದಿದೆ.





















