SK Home Ad
Home ಸುದ್ದಿ ರಾಜ್ಯ ಗ್ರಾಮಗಳ ಚಿತ್ರಣ ಬದಲಿಸಲು 16 ಸಾವಿರ ಕೋಟಿ ರೂ. ಪ್ಲ್ಯಾನ್

ಗ್ರಾಮಗಳ ಚಿತ್ರಣ ಬದಲಿಸಲು 16 ಸಾವಿರ ಕೋಟಿ ರೂ. ಪ್ಲ್ಯಾನ್

0
7

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೊಸ ವೇಗ ನೀಡಲು ಸರ್ಕಾರ 16 ಸಾವಿರ ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದೆ. ಗ್ರಾಮೀಣ ರಸ್ತೆ ಸಂಪರ್ಕ ಸುಧಾರಣೆಗೆ 10 ಸಾವಿರ ಕೋಟಿ ರೂ. ಹಾಗೂ ಪಂಚಾಯಿತಿ ಮಟ್ಟದ ಮೂಲಸೌಕರ್ಯ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ 6 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶುಕ್ರವಾರ ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ ಹಾಗೂ ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರ ನೀಡುವ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ಹಣ ದುರುಪಯೋಗಕ್ಕೆ ಅವಕಾಶ ನೀಡುವುದಿಲ್ಲ. ಪ್ರತಿಯೊಂದು ಹಂತದಲ್ಲೂ ಪಾರದರ್ಶಕತೆ ಹಾಗೂ ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾಮಗಾರಿ ಆರಂಭಕ್ಕೂ ಮುನ್ನ ಸ್ಥಳದ ವಿಡಿಯೊ ಹಾಗೂ ಛಾಯಾಚಿತ್ರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು. ಕಾಮಗಾರಿ ಪೂರ್ಣಗೊಂಡ ನಂತರದ ಚಿತ್ರಗಳನ್ನೂ ಸಂಗ್ರಹಿಸಿಡಬೇಕು. ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸದೆ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುವಂತಿಲ್ಲ. ಕಾಮಗಾರಿಗಳ ಪ್ರಗತಿಯನ್ನು ಮುಖ್ಯಮಂತ್ರಿ ಡ್ಯಾಶ್‌ಬೋರ್ಡ್ ಮೂಲಕ ನೇರವಾಗಿ ಮೇಲ್ವಿಚಾರಣೆ ಮಾಡಲಾಗುವುದು ಎಂದರು.

ಕಾಮಗಾರಿ ನಡೆಸದೆ ಬಿಲ್ ಪಡೆಯುವುದು, ಅಧಿಕಾರಿಗಳೊಂದಿಗೆ ಶಾಮೀಲಾಗಿ ಸರ್ಕಾರಿ ಹಣ ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಲಾಗುವುದು. ಯೋಜನೆಗಳ ಅನುಷ್ಠಾನದಲ್ಲಿ ಲೋಪ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

15 ಸಾವಿರ ಕಿ.ಮೀ. ರಸ್ತೆ ಅಭಿವೃದ್ಧಿ: ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ರಾಜ್ಯಾದ್ಯಂತ ಸುಮಾರು 15 ಸಾವಿರ ಕಿ.ಮೀ. ರಸ್ತೆಗಳನ್ನು ಅಭಿವೃದ್ಧಿಪಡಿಸಲು 10 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ರಸ್ತೆ ಮರು ಡಾಂಬರೀಕರಣ, ಜಲ್ಲಿ ರಸ್ತೆ ಸುಧಾರಣೆ, ಚರಂಡಿ ನಿರ್ಮಾಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ.

ಕಾಮಗಾರಿಯ ಸ್ವರೂಪಕ್ಕೆ ಅನುಗುಣವಾಗಿ ಪ್ರತಿ ಕಿ.ಮೀ. ರಸ್ತೆ ಅಭಿವೃದ್ಧಿಗೆ 38 ಲಕ್ಷದಿಂದ 70 ಲಕ್ಷ ರೂ.ವರೆಗೆ ವೆಚ್ಚ ಅಂದಾಜಿಸಲಾಗಿದೆ. ಈಗಾಗಲೇ ಪ್ರಗತಿ ಪಥ ಯೋಜನೆಯಡಿ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ತಿಳಿಸಿದರು.