ಬೆಳಗಾವಿ: ‘ಬಸವ ಮಂಟಪ’ ಕೃತಿ ವಿವಾದಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ ಅವರನ್ನು ಶನಿವಾರ ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತಡೆದು, ಬೆಂಗಳೂರು ನಗರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಬಸವಣ್ಣನವರ ವ್ಯಕ್ತಿತ್ವದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಜಾಗತಿಕ ಲಿಂಗಾಯತ ಮಹಾಸಭೆಯ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ನೀಡಿದ ದೂರಿನ ಅನ್ವಯ, ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ರವಿ ಹಂಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಲುಕೌಟ್ ನೋಟಿಸ್ ಜಾರಿಗೊಳಿಸಿದ್ದರು.
ವಿದೇಶಕ್ಕೆ ತೆರಳಲು ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿದ್ದ ರವಿ ಹಂಜ್ ಅವರನ್ನು ನೋಟಿಸ್ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಬಳಿಕ ಬೆಂಗಳೂರು ನಗರ ಪೊಲೀಸರಿಗೆ ಮಾಹಿತಿ ನೀಡಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಈ ಬೆಳವಣಿಗೆಯ ಕುರಿತು ಬೆಳಗಾವಿ ಪೊಲೀಸರಿಗೆ ಮಾಹಿತಿ ಬಂದಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್ ತಿಳಿಸಿದ್ದಾರೆ.
ವಶಕ್ಕೆ ಪಡೆದಿರುವುದು ಬಂಧನವಲ್ಲ: ‘ಬೆಳಗಾವಿ ಪೊಲೀಸರು ರವಿ ಹಂಜ್ ಅವರನ್ನು ಈವರೆಗೆ ಬಂಧಿಸಿಲ್ಲ. ಕೊಚ್ಚಿಯಲ್ಲಿ ಬೆಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ಬಳಿಕ ಬಂಧನ ಅಥವಾ ಮುಂದಿನ ಕ್ರಮದ ಕುರಿತು ಅವರೇ ನಿರ್ಧರಿಸಲಿದ್ದಾರೆ. ಬೆಂಗಳೂರಿನ ವಿಚಾರಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕವಷ್ಟೇ ಅವರನ್ನು ಬೆಳಗಾವಿಗೆ ಕರೆತರಲು ಸಾಧ್ಯ’ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.




















