ಬೆಂಗಳೂರು: ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ನಟಿ, ಮಾಜಿ ಸಂಸದೆ ರಮ್ಯಾ (ದಿವ್ಯ ಸ್ಪಂದನ) ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಳೆದ ನಾಲ್ಕು ದಿನಗಳಿಂದ ಹಗಲು-ರಾತ್ರಿ ಎನ್ನದೆ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ದನಿ ಎತ್ತಿದ್ದಾರೆ.
ಆಶಾ ಕಾರ್ಯಕರ್ತೆಯರು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ಅವರಿಗೆ ನ್ಯಾಯಯುತವಾದ, ಗೌರವಯುತವಾದ ವೇತನವನ್ನು ಸಕಾಲದಲ್ಲಿ ನೀಡಬೇಕು. ಸರ್ಕಾರ ನೀಡಿರುವ ಭರವಸೆ ಶೀಘ್ರದಲ್ಲೇ ಅಧಿಕೃತ ನಿರ್ಧಾರವಾಗಿ ಬದಲಾಗಲಿದೆ ಎಂಬ ಭರವಸೆ ಇದೆ ಎಂದು ರಮ್ಯಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ ನಾಲ್ಕು ದಿನಗಳಿಂದ ಮಹಿಳೆಯರು ಕನಿಷ್ಠ ಗೌರವಧನಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ತಮ್ಮ ಹಕ್ಕಿಗಾಗಿ ವಿಧಾನಸೌಧದಿಂದ ಕೇವಲ 1.5 ಕಿ.ಮೀ. ದೂರದಲ್ಲಿ ಕುಳಿತು ಧ್ವನಿ ಎತ್ತುತ್ತಿದ್ದರೂ ಸರ್ಕಾರಕ್ಕೆ ಅವರ ಕೂಗು ಕೇಳಿಸುತ್ತಿಲ್ಲವೇ ಎಂಬ ಪ್ರಶ್ನೆಯನ್ನೂ ರಮ್ಯಾ ತಮ್ಮ ಪೋಸ್ಟ್ನಲ್ಲಿ ಪ್ರಸ್ತಾಪಿಸಿದ್ದಾರೆ.
ರಾಜ್ಯದ ಸುಮಾರು 41 ಸಾವಿರ ಆಶಾ ಕಾರ್ಯಕರ್ತೆಯರು ಮಾಸಿಕ 15 ಸಾವಿರ ರೂ. ನಿಗದಿತ ಗೌರವಧನ ನೀಡಬೇಕು ಹಾಗೂ ಬಾಕಿ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 17ರಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ಬೆಂಬಲ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ನಟಿ ರಮ್ಯಾ ಕೂಡ ಬೆಂಬಲ ಸೂಚಿಸಿರುವುದು ಗಮನ ಸೆಳೆದಿದೆ.



















