ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ತಮ್ಮ ರಾಜಕೀಯ ಹಿರಿತನಕ್ಕೆ ತಕ್ಕುದಲ್ಲ ಎಂದು ಹೇಳಿರುವ ಅವರು, ಈ ಹುದ್ದೆಯಿಂದ ತೃಪ್ತಿಯಿಲ್ಲ ಎಂಬ ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ತನ್ವೀರ್ ಸೇಠ್, ‘ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ನನ್ನ ಹಿರಿತನಕ್ಕೆ ತಕ್ಕುದಲ್ಲ. ಇದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಹುದ್ದೆಯೂ ಅಲ್ಲ. ಈ ಹುದ್ದೆ ನೀಡುವುದು ಬೇಡ ಎಂದು ಈ ಹಿಂದೆಯೇ ತಿಳಿಸಿದ್ದೆ. ಆದರೂ ನನಗೆ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ’ ಎಂದಿದ್ದಾರೆ.
‘ಈವರೆಗೆ ಮುಖ್ಯಮಂತ್ರಿ ಕಚೇರಿಯಿಂದ ನನಗೆ ಯಾವುದೇ ಕರೆ ಬಂದಿಲ್ಲ. ರಾಜಕೀಯ ಕಾರ್ಯದರ್ಶಿ ಹುದ್ದೆಯನ್ನು ಸ್ವೀಕರಿಸಬೇಕೋ ಅಥವಾ ಬೇಡವೋ ಎಂಬುದನ್ನು ನಾನೇ ನಿರ್ಧರಿಸುತ್ತೇನೆ’ ಎಂದು ತಿಳಿಸಿದ್ದಾರೆ.
ಸರ್ಕಾರ ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ವಿವಿಧ ಹುದ್ದೆಗಳಿಗೆ ನೇಮಕಾತಿ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ತನ್ವೀರ್ ಸೇಠ್ ಅವರ ಈ ಅಸಮಾಧಾನ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.




















