SK Home Ad
Home ಸುದ್ದಿ ಬೆಳಗಾವಿಯಲ್ಲಿ 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲು, ಮುಂದಿನ 5 ದಿನ ಚಳಿ ಮುಂದುವರಿಕೆ

ಬೆಳಗಾವಿಯಲ್ಲಿ 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲು, ಮುಂದಿನ 5 ದಿನ ಚಳಿ ಮುಂದುವರಿಕೆ

0
5

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಚಳಿಯ ವಾತಾವರಣವೂ ಮುಂದಿನ ದಿನಗಳಲ್ಲಿಯೂ ಮುಂದುವರಿಯುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳವರೆಗೆ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ನವೆಂಬರ್ 24ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಂಭವವಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ.

ಇದೇ ದಿನ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಅಲ್ಲದೆ, ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ನವೆಂಬರ್ 24 ಮತ್ತು 25ರಂದು ಒಂದೆರಡು ಕಡೆ ಗುಡುಗು ಸಹಿತ ಮಿಂಚು ಸಂಭವಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.