SK Home Ad
Home ಸುದ್ದಿ ರಾಜ್ಯ ಕೊಟ್ಟ ಮಾತಿನಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಯನಾ ಮೋಟಮ್ಮ

ಕೊಟ್ಟ ಮಾತಿನಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಯನಾ ಮೋಟಮ್ಮ

0
74

ಬೆಂಗಳೂರು: ಹಾಸನ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ, ತಾವು ನೀಡಿದ್ದ ಎಚ್ಚರಿಕೆಯಂತೆ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಭಾನುವಾರ ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ನಯನಾ ಮೋಟಮ್ಮ, ಹಾಸನ ಭಾಗದ ಕಾಡಾನೆಗಳನ್ನು ಮೂಡಿಗೆರೆ ಕ್ಷೇತ್ರದ ವ್ಯಾಪ್ತಿಗೆ ಸ್ಥಳಾಂತರಿಸಿರುವುದನ್ನು ಖಂಡಿಸಿದ್ದರು. ಅಲ್ಲದೆ, ಆನೆಗಳನ್ನು ಮೂಲಸ್ಥಾನಕ್ಕೆ ವಾಪಸ್ ಕಳುಹಿಸದಿದ್ದರೆ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದರು. ಇದೀಗ ತಮ್ಮ ಮಾತಿನಂತೆ ಸೋಮವಾರ (ನ. 23) ವಿಧಾನಸೌಧಕ್ಕೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಾಡಾನೆಗಳ ಸ್ಥಳಾಂತರ ವಿಚಾರದಲ್ಲಿ ಸ್ವಪಕ್ಷದ ಸರ್ಕಾರದ ನಿರ್ಧಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದ ಅವರು, ವಿಧಾನಸಭಾಧ್ಯಕ್ಷರ ಕಚೇರಿಗೆ ತೆರಳಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಆದರೆ, ಆ ಸಮಯದಲ್ಲಿ ಸ್ಪೀಕರ್ ಕಚೇರಿಯಲ್ಲಿ ಇರಲಿಲ್ಲ. ಹೀಗಾಗಿ ಅವರ ಆಪ್ತ ಕಾರ್ಯದರ್ಶಿ ಅಶೋಕ್ ಮಿರ್ಜಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜೀನಾಮೆ ಪತ್ರವನ್ನು ಅಧಿಕೃತವಾಗಿ ಅಂಗೀಕರಿಸುವ ಅಧಿಕಾರ ತಮಗಿಲ್ಲ ಎಂದು ಆಪ್ತ ಕಾರ್ಯದರ್ಶಿ ತಿಳಿಸಿದ್ದು, ನಯನಾ ಮೋಟಮ್ಮ ರಾಜೀನಾಮೆ ಸಲ್ಲಿಸಿರುವ ವಿಚಾರವನ್ನು ದೂರವಾಣಿ ಮೂಲಕ ಸ್ಪೀಕರ್ ಅವರ ಗಮನಕ್ಕೆ ತಂದಿದ್ದಾರೆ.

ಕಾಡಾನೆಗಳ ಸ್ಥಳಾಂತರ ವಿಚಾರ ಆಡಳಿತಾರೂಢ ಕಾಂಗ್ರೆಸ್‌ನಲ್ಲೇ ಅಸಮಾಧಾನಕ್ಕೆ ಕಾರಣವಾಗಿದ್ದು, ಶಾಸಕಿ ನಯನಾ ಮೋಟಮ್ಮ ಅವರ ರಾಜೀನಾಮೆ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.