ಹುಬ್ಬಳ್ಳಿ: ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಗೂ ತಾಲೂಕು ಪಂಚಾಯಿತಿ ಚುನಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ತಕ್ಷಣ ನಡೆಯಬಹುದು. ಆದರೆ ರಸ್ತೆ ಕಾಮಗಾರಿ ಮುಗಿಯಲು ಸಮಯ ಬೇಕು. ಗ್ರಾಮೀಣ ಜನರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದೇ ಸರ್ಕಾರದ ಉದ್ದೇಶ. ಇದುವರೆಗೆ ಅಭಿವೃದ್ಧಿ ಕಾಣದ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಸ್ಥಾನಮಾನ ನೀಡಿರುವುದನ್ನು ಸ್ವಾಗತಿಸಿದ ಅವರು, ನಿಷ್ಠೆಯಿಂದ ದುಡಿದವರಿಗೆ ಪ್ರಾತಿನಿಧ್ಯ ಸಿಕ್ಕಂತಾಗುತ್ತದೆ. ಇದರಿಂದ ಪಕ್ಷ ಸಂಘಟನೆ ಮತ್ತಷ್ಟು ಬಲಗೊಳ್ಳುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಸವಣ್ಣನವರ ಕುರಿತು ಹಂಜ ಬರೆದ ಪುಸ್ತಕವನ್ನು ಈಗಾಗಲೇ ಖಂಡಿಸಿದ್ದೇವೆ. ಲೇಖಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.




















