SK Home Ad
Home ನಮ್ಮ ಜಿಲ್ಲೆ ದಾವಣಗೆರೆ ದೇವಸ್ಥಾನ, ಮಸೀದಿ ನಿರ್ಮಾಣದಷ್ಟೇ ಶಿಕ್ಷಣಕ್ಕೂ ಆದ್ಯತೆ ನೀಡಿ

ದೇವಸ್ಥಾನ, ಮಸೀದಿ ನಿರ್ಮಾಣದಷ್ಟೇ ಶಿಕ್ಷಣಕ್ಕೂ ಆದ್ಯತೆ ನೀಡಿ

0
15

ದಾವಣಗೆರೆ: ದೇವಸ್ಥಾನ, ಮಸೀದಿಗಳ ನಿರ್ಮಾಣಕ್ಕೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೂ ನೀಡಬೇಕು. ಅಲ್ಪಸಂಖ್ಯಾತ ಮತ್ತು ದಲಿತ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗದೆ ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಬೇಕು. ಮನೆಗೊಬ್ಬ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತಹ ಜ್ಞಾನಿಗಳು ಹುಟ್ಟಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.

ದಾವಣಗೆರೆಯ ಹಳೇ ಭಾಗದ ಸುಲ್ತಾನ್ ಪ್ಯಾಲೇಸ್ ಸಮುದಾಯ ಭವನದಲ್ಲಿ ದಾವಣಗೆರೆ ಜಿಲ್ಲಾ ಮುಸ್ಲಿಂ ಅಲ್ಪಸಂಖ್ಯಾತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ, ಶ್ರೇಷ್ಠ ವಿದ್ಯಾರ್ಥಿ ಹಾಗೂ ಟಾಪರ್ ಪ್ರಶಸ್ತಿ ಮತ್ತು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇವರ ಅನುಗ್ರಹದ ಜೊತೆಗೆ ಶಿಕ್ಷಣದ ಅನುಗ್ರಹವೂ ಅಗತ್ಯ. ಧರ್ಮ ಮತ್ತು ಶಿಕ್ಷಣ ಬಂಡಿಯ ಎರಡು ಗಾಲಿಗಳಂತೆ ಜೊತೆಗೂಡಿ ಸಾಗಿದರೆ ಮಾತ್ರ ಸಮುದಾಯದ ಸಮಗ್ರ ಅಭಿವೃದ್ಧಿ ಸಾಧ್ಯ. ಹಳೆ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಸರ್ಕಾರಿ ಪದವಿ ಕಾಲೇಜು ಸ್ಥಾಪನೆ ಕುರಿತು ಶಾಸಕರು ಹಾಗೂ ಸಂಬಂಧಿಸಿದವರೊಂದಿಗೆ ಚರ್ಚಿಸಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಆರ್ಥಿಕ ನೆರವು ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಬಳಿ ನಿಯೋಗ ಕೊಂಡೊಯ್ಯುವುದಾಗಿಯೂ ತಿಳಿಸಿದರು.

ಇಂದಿನ ಮಕ್ಕಳು ಮೊಬೈಲ್ ಬಳಕೆಯಿಂದ ಶಿಕ್ಷಣದ ಕಡೆಗಿನ ಗಮನ ಕಳೆದುಕೊಳ್ಳುತ್ತಿರುವುದು ಆತಂಕಕಾರಿ ಸಂಗತಿ. ಪೋಷಕರು ಈ ಬಗ್ಗೆ ಎಚ್ಚರ ವಹಿಸಿ, ಮಕ್ಕಳು ಪದವಿ ಪಡೆಯುವವರೆಗೂ ಮೊಬೈಲ್ ಬಳಕೆಯನ್ನು ನಿಯಂತ್ರಿಸಿ ಶಿಕ್ಷಣದತ್ತ ಹೆಚ್ಚು ಗಮನ ಹರಿಸುವಂತೆ ಮಾಡಬೇಕು ಎಂದು ಸಲಹೆ ನೀಡಿದರು. ಹೆಣ್ಣುಮಕ್ಕಳು ಹೆಚ್ಚು ವಿದ್ಯಾವಂತರಾಗಿ ಕೆಎಎಸ್, ಐಎಎಸ್ ಸೇರಿದಂತೆ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಶಿಕ್ಷಣವೇ ಸಮುದಾಯದ ಅಭಿವೃದ್ಧಿಗೆ ಪ್ರಮುಖ ಅಸ್ತ್ರವಾಗಿದೆ ಎಂದರು.

ಸಮುದಾಯದ ಸಮಸ್ಯೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗಮನಕ್ಕೆ ತಂದು ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಪಡೆಯುವ ಉದ್ದೇಶದಿಂದ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಒಂದೇ ವೇದಿಕೆಯಲ್ಲಿ ಒಗ್ಗೂಡಿರುವುದು ಶ್ಲಾಘನೀಯ. ಹಿಂದೆ ಸಮುದಾಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ, ಇಂದು ಒಕ್ಕೂಟವಾಗಿ ಒಂದೇ ವೇದಿಕೆಯಲ್ಲಿ ಸೇರಿರುವುದು ಸಂತಸದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳು ಹಾಗೂ ನೀತಿಗಳನ್ನು ರೂಪಿಸಿವೆ. ಅವುಗಳ ನಿಯಮಗಳನ್ನು ಪಾಲಿಸಿ, ಸಮುದಾಯದ ಏಳಿಗೆ ಹಾಗೂ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಅನುದಾನ ಮತ್ತು ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಕೇವಲ ದುಡಿಮೆಯಿಂದ ಸಮುದಾಯದ ಸಮಗ್ರ ಪ್ರಗತಿ ಸಾಧ್ಯವಿಲ್ಲ; ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಗತ್ಯ. ಶಿಕ್ಷಣದಿಂದ ಜ್ಞಾನ, ಸಂವಿಧಾನದ ಅರಿವು ಹಾಗೂ ಸರ್ಕಾರಿ ಉದ್ಯೋಗ ಪಡೆಯುವ ಅವಕಾಶಗಳು ಹೆಚ್ಚುತ್ತವೆ ಎಂದರು.

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿ ಹಾಗೂ ಪ್ರಸ್ತುತ ಸರ್ಕಾರದ ಅವಧಿಯಲ್ಲಿ ಸಮುದಾಯಕ್ಕೆ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ದಿ. ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ಶಾಸಕ ಸಮರ್ಥ್ ಶಾಮನೂರು ಅವರು ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿದ ಸಚಿವರು, ಇದೇ ವೇಳೆ ಆಜಾದ್ ನಗರ, ಭಾಷಾ ನಗರ ಹಾಗೂ ಸೈಫುಲ್ಲಾ ಮೈದಾನದ ಹಿಂದಿನ ದಿನಗಳ ನೆನಪುಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಶಾಸಕ ಸಮರ್ಥ್ ಶಾಮನೂರು, ಒಕ್ಕೂಟದ ಗೌರವಾಧ್ಯಕ್ಷ ಮಹಮದ್‌ಗೌಸ್, ಉಪಾಧ್ಯಕ್ಷ ಅಬ್ದುಲ್ ರಹೀಂ, ಮೈನುದ್ದೀನ್, ಆದಿಲ್ ಶಾ, ಕಾರ್ಯದರ್ಶಿ ಸೈಯದ್ ಸುಭಾನ್, ಸಂಘಟನಾ ಕಾರ್ಯದರ್ಶಿ ದಾದಾಪೀರ್, ಸದಸ್ಯ ಮುಸ್ತಾಫ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಶಿಕ್ಷಕರು ಹಾಗೂ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.