ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಅವರಿಗೆ ಸಿಐಡಿಯಿಂದ ಕ್ಲೀನ್ಚಿಟ್ ದೊರೆತಿದೆ ಎಂಬ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
ಬಳ್ಳಾರಿಯ ರಾಯಲ್ ವೃತ್ತದಲ್ಲಿ ಜಮಾಯಿಸಿದ ನಾಗೇಂದ್ರ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು. ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ ಎಂಬುದಕ್ಕೆ ಸಿಐಡಿ ವರದಿಯೇ ಸಾಕ್ಷಿಯಾಗಿದೆ ಎಂದು ಅಭಿಮಾನಿಗಳು ಪ್ರತಿಪಾದಿಸಿದರು.
ನಾಗೇಂದ್ರ ಅವರು ನಿಗಮದ ಹಣ ದುರುಪಯೋಗಪಡಿಸಿಕೊಂಡಿರುವುದಕ್ಕೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ನಡುವಿನ ಅಕ್ರಮ ಹಣ ವರ್ಗಾವಣೆ ಅವರ ಗಮನಕ್ಕೆ ಬಂದಿರಲಿಲ್ಲ ಎಂದು ಸಿಐಡಿ ತನ್ನ ಅಂತಿಮ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ ಎನ್ನಲಾಗಿದೆ. ಈ ಬೆಳವಣಿಗೆಯಿಂದ ನಾಗೇಂದ್ರ ಅವರಿಗೆ ನ್ಯಾಯ ದೊರೆತಂತಾಗಿದೆ ಎಂದು ಅಭಿಮಾನಿಗಳು ಸಂತಸ ಹಂಚಿಕೊಂಡರು.
ಇದೇ ವೇಳೆ, ನಾಗೇಂದ್ರ ಅವರು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ವಿಶ್ವಾಸವನ್ನೂ ಅಭಿಮಾನಿಗಳು ವ್ಯಕ್ತಪಡಿಸಿದರು. ಶೀಘ್ರದಲ್ಲೇ ಅವರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ನಿರೀಕ್ಷೆಯಿದ್ದು, ಬಳ್ಳಾರಿ ಜಿಲ್ಲೆಗೆ ಮತ್ತೊಮ್ಮೆ ಸಚಿವ ಸ್ಥಾನ ಸಿಗುವ ದಿನಗಳು ದೂರವಿಲ್ಲ ಎಂದು ಆಶಾಭಾವನೆ ವ್ಯಕ್ತಪಡಿಸಿದರು.






















