SK Home Ad
Home ಸುದ್ದಿ ರಾಜ್ಯ ಹಿರಿಯೂರು ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಜಂಟಿ ರಣತಂತ್ರ

ಹಿರಿಯೂರು ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಜಂಟಿ ರಣತಂತ್ರ

0
6

ಬೆಂಗಳೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಯಾರೇ ಆಗಿರಲಿ, ಅವರನ್ನು ಒಗ್ಗಟ್ಟಿನಿಂದ ಗೆಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ. ಅಭ್ಯರ್ಥಿ ಆಯ್ಕೆಯ ಹೊಣೆಯನ್ನು ಬಿಜೆಪಿ ರಾಷ್ಟ್ರೀಯ ವರಿಷ್ಠರಿಗೆ ವಹಿಸಲು ಉಭಯ ಪಕ್ಷಗಳ ಸಮನ್ವಯ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಹಿರಿಯೂರು ಉಪಚುನಾವಣೆ ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಹಿರಿಯೂರು ಕ್ಷೇತ್ರದಲ್ಲಿ ಈ ಹಿಂದೆಯೂ ಜೆಡಿಎಸ್ ಗಣನೀಯ ಪ್ರಮಾಣದ ಮತಗಳನ್ನು ಪಡೆದಿದೆ. ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡಿದರೆ ಗೆಲುವು ಸಾಧ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್‌ನಿಂದಲೇ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬ ನಿಲುವಿಗಿಂತ ಎನ್‌ಡಿಎ ಅಭ್ಯರ್ಥಿಯ ಗೆಲುವು ಮುಖ್ಯ. ಅಭ್ಯರ್ಥಿ ಬಿಜೆಪಿ ಅಥವಾ ಜೆಡಿಎಸ್‌ನವರಾಗಿರಲಿ, ರಾಷ್ಟ್ರೀಯ ವರಿಷ್ಠರ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಸ್ಪಷ್ಟಪಡಿಸಿದರು.

ಇದೇ ನಿಲುವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಕೂಡ ಸಹಮತ ವ್ಯಕ್ತಪಡಿಸಿದರು. ವರಿಷ್ಠರು ಆಯ್ಕೆ ಮಾಡುವ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಅಭಿಪ್ರಾಯಪಟ್ಟರು.

ಇನ್ನು ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಂಟಿಯಾಗಿ ಹೋರಾಟ ನಡೆಸಲು ಸಭೆ ನಿರ್ಧರಿಸಿತು. ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುವ ಮೂಲಕ ಆಡಳಿತ ಪಕ್ಷವನ್ನು ಒಗ್ಗಟ್ಟಿನಿಂದ ಎದುರಿಸುವ ತೀರ್ಮಾನವನ್ನೂ ಕೈಗೊಳ್ಳಲಾಯಿತು.

ಸಭೆಯಲ್ಲಿ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ಮಾಜಿ ಸಚಿವ ಆರಗ ಜ್ಞಾನೇಂದ್ರ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಶಾಸಕಿ ಶಾರದಾ ಪರ‍್ಯನಾಯಕ್, ಮಾಜಿ ಶಾಸಕ ಕೃಷ್ಣಾರೆಡ್ಡಿ ಸೇರಿದಂತೆ ಉಭಯ ಪಕ್ಷಗಳ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.