ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮಹಿಳಾ ಮೀಸಲಾತಿ ಜಾರಿಗೆ ತರುವುದರ ಜತೆಗೆ ಕ್ಷೇತ್ರ ಮರುವಿಂಗಡಣೆಗೆ ಅವಕಾಶ ಕಲ್ಪಿಸುವ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 2029ರ ಲೋಕಸಭಾ ಚುನಾವಣೆಯ ವೇಳೆಗೆ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ.
ಮಸೂದೆಯ ಕರಡು ಪ್ರತಿಯಲ್ಲಿ ಈ ಹಿಂದೆ ಆಕ್ಷೇಪಣೆಗೆ ಕಾರಣವಾಗಿದ್ದ ಕೆಲವು ಅಂಶಗಳನ್ನು ಸರಿಪಡಿಸಿ, ಅಗತ್ಯ ಮಾರ್ಪಾಡುಗಳನ್ನು ಮಾಡಲಾಗಿದೆ. ಅದರಲ್ಲೂ ಜನಸಂಖ್ಯೆ ನಿಯಂತ್ರಣದಲ್ಲಿ ಯಶಸ್ಸು ಸಾಧಿಸಿರುವ ದಕ್ಷಿಣ ಭಾರತದ ರಾಜ್ಯಗಳಿಗೆ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದರ ಅನ್ವಯ, ರಾಜ್ಯವಾರು ಲೋಕಸಭಾ ಸ್ಥಾನಗಳ ಹಂಚಿಕೆಯ ಅನುಪಾತವನ್ನು 1971ರ ಜನಗಣತಿಯ ಆಧಾರದಲ್ಲೇ ನಿಗದಿಪಡಿಸಲು ಉದ್ದೇಶಿಸಲಾಗಿದೆ. ಆದರೆ, ಆಯಾ ರಾಜ್ಯಗಳಿಗೆ ಹೆಚ್ಚುವರಿಯಾಗಿ ಹಂಚಿಕೆಯಾಗುವ ಸ್ಥಾನಗಳನ್ನು ಗುರುತಿಸುವ ಆಂತರಿಕ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಗೆ ಮಾತ್ರ 2011ರ ಜನಗಣತಿಯ ದತ್ತಾಂಶವನ್ನು ಬಳಸಿಕೊಳ್ಳಲಾಗುತ್ತದೆ.
ಹೊಸ ಜನಗಣತಿ ಪೂರ್ಣಗೊಳ್ಳುವವರೆಗೆ ಮಹಿಳಾ ಮೀಸಲಾತಿ ಜಾರಿಯನ್ನು ಮುಂದೂಡದೆ, ಲಭ್ಯವಿರುವ ಜನಗಣತಿ ದತ್ತಾಂಶವನ್ನೇ ಆಧರಿಸಿ ಪ್ರಕ್ರಿಯೆ ಆರಂಭಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಈ ಮೂಲಕ 2029ರ ಲೋಕಸಭಾ ಚುನಾವಣೆಯಲ್ಲೇ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.





















