ಚಿತ್ರದುರ್ಗ: ಕೇಂದ್ರ ಸರ್ಕಾರ ಶೀಘ್ರದಲ್ಲೇ ರಾಜ್ಯಕ್ಕೆ ಬರ ಪರಿಹಾರ ನೀಡಬೇಕು. ನ್ಯಾಯ ಸಿಗದಿದ್ದರೆ ನಾವು ಕೋರ್ಟ್ ಮೊರೆ ಹೋಗುತ್ತೇವೆ ಎಂದು ಸಚಿವ ಟಿ. ರಘುಮೂರ್ತಿ ಅವರು ಹೇಳಿದರು.
ಚಿತ್ರದುರ್ಗದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ದಾಖಲೆಗಳನ್ನು ನೀಡಿದ್ದರೂ ಪರಿಹಾರ ಬಂದಿಲ್ಲ. ರಾಜ್ಯದ ರೈತರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ಕಾನೂನು ಹೋರಾಟಕ್ಕೂ ನಾವು ಸಿದ್ಧರಿದ್ದೇವೆ ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರ ವಿಚಾರ ಕುರಿತು ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ಸರ್ಕಾರದ ನಿರ್ಧಾರವನ್ನು ಒಪ್ಪಿದ್ದಾರೆ. ಅವರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಅವರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಹೇಳಿದರು.
ಕೇಂದ್ರದಿಂದ ಕ್ಷೇತ್ರ ಪುನರ್ ವಿಂಗಡಣೆ ಬಿಲ್ ಮಂಡನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಇಂಡಿಯಾ ಒಕ್ಕೂಟ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಿದೆ. ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.
ಬೆಲೆ ಏರಿಕೆ ವಿಚಾರ ಕುರಿತು ಮಾತನಾಡಿದ ಅವರು, ಕಾಲಕ್ಕೆ ತಕ್ಕಂತೆ ಬೆಲೆ ಏರಿಕೆ ನಡೆದಿದೆ. ಎಲ್ಲಾ ಕಾಲದಲ್ಲೂ ಬೆಲೆ ಏರಿಕೆ ಸಾಮಾನ್ಯ. ಅದನ್ನು ನಿಭಾಯಿಸಲು ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ನೆರವಾಗುತ್ತಿದೆ ಎಂದು ಹೇಳಿದರು.






















