ಭಯೋತ್ಪಾದಕರನ್ನು ಹೊಡೆದುರುಳಿಸಲು ನಡೆಸಿದ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಸ್ಫೋಟದಲ್ಲಿ ಐವರು ಯೋಧರು ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆದಿದೆ.
ಇತ್ತೀಚೆಗಷ್ಟೇ ಸೇನೆಯ ವಾಹನದ ಮೇಲೆ ದಾಳಿ ನಡೆಸಿ ಐವರು ಯೋಧರ ಸಾವಿಗೆ ಕಾರಣರಾಗಿದ್ದ ಉಗ್ರರನ್ನು ಹೊಡೆದುರುಳಿಸಲು ಸೇನೆ ಗುಪ್ತಚರ ಆಧಾರಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿತ್ತು.
ಈ ವೇಳೆ ಉಗ್ರರು ಸ್ಫೋಟಕಗಳನ್ನು ಸಿಡಿಸಿದ್ದಾರೆ. ಪರಿಣಾಮ ಐವರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೇಜರ್ ಶ್ರೇಣಿಯ ಅಧಿಕಾರಿ ಸೇರಿದಂತೆ ಎಂಟು ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸುತ್ತಮುತ್ತಲಿನ ಹೆಚ್ಚುವರಿ ತಂಡಗಳನ್ನು ನಿಯೋಜಿಸಲಾಗಿದೆ. ಸೇನೆ ಉಗ್ರರ ನೆಲೆಯನ್ನು ಸುತ್ತುವರಿದಿದ್ದು, ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.