ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ರಾಹುಲ್ ಗಾಂಧಿ

0
21

ಬೆಳಗಾವಿ: ಈ ತಿಂಗಳ ಅಂತ್ಯದಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾರ್ಯಕ್ರಮ ನಡೆಯಲಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರು ಆಗಮಿಸುತ್ತಿದ್ದಾರೆ. ಸೋನಿಯಾ ಗಾಂಧಿ ಅವರಿಗೂ ಆಹ್ವಾನ ನೀಡಿದ್ದೇವೆ. ಒಂದು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಒಂದೊಂದು ವಿಭಾಗದಲ್ಲಿ ಒಂದೊಂದು ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಶಕ್ತಿ ಯೋಜನೆ, ಕಲಬುರ್ಗಿಯಲ್ಲಿ ಗೃಹ ಜ್ಯೋತಿ, ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆ, ಈಗ ಬೆಳಗಾವಿಯಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು. ಯುವನಿಧಿ ಯೋಜನೆಯನ್ನು ಡಿಸೆಂಬರ್ ಇಲ್ಲವೇ ಜನವರಿಯಲ್ಲಿ‌ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಲು ಅರ್ಹರಿರುವ 1 ಕೋಟಿ 33 ಲಕ್ಷ ಕುಟುಂಬಗಳ ಪೈಕಿ ಈಗಾಗಲೇ 1 ಕೋಟಿ‌ 6 ಲಕ್ಷ ನೊಂದಣಿಯಾಗಿದೆ. ಬಡವರು, ಮಹಿಳೆಯರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಿಎಂ ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಮಾಡಬೇಕಾದ ಸಿದ್ಧತೆಗಳ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ ಆಸೀಫ್ ಸೇಠ್ ಮತ್ತಿತರರು ಇದ್ದರು.
ಇದಕ್ಕೂ ಮೊದಲು ಸಿಪಿಎಡ್ ಮೈದಾನವನ್ನು ಸಹ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪರಿಶೀಲಿಸಿದರು.

Previous articleಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ: 8ಕ್ಕೂ ಹೆಚ್ಚು ಸಿಬ್ಬಂದಿಗೆ ಗಾಯ
Next articleಧಾರವಾಡ ಪಾಲಿಕೆ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ