ತುಮಕೂರು: ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಳೆಯಿಂದ ಯಾವುದೇ ಜನ, ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಪಾಯವಿರುವ ಸೇತುವೆಗಳಲ್ಲಿ ಫೋಟೋ, ಸೆಲ್ಪಿಗಳನ್ನು ತೆಗೆಯದಂತೆ ಯುವಕ, ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಬೇಕು. ಭಾರಿ ಮಳೆ ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಹಾಗೂ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಗ್ರಾಮ ಆಡಳಿತ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡ, ಸಾವು, ನೋವುಗಳು ಸಂಭವಿಸುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರುವಂತೆ ಮುನ್ನೆಚ್ಚರಿಕೆ ಕ್ರಮಕೈ ಗೊಳ್ಳಬೇಕು. ರಾಜ್ಯ, ಜಿಲ್ಲಾಡಳಿತ, ತಾಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳು ನೀಡುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶಸಿದ್ದಾರೆ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ: 7304975519 ಅಥವಾ ದೂರವಾಣಿ ಸಂಖ್ಯೆ : 0816- 2213400, 0816-155304 ಅಥವಾ ವಾಟ್ಸಪ್ ಸಂಖ್ಯೆ: 7304975529ನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದು ಸೂಚನೆ ನೀಡಿದ್ದಾರೆ .

























