ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಸೋಲಿನ ಬಳಿಕ ನಿಖಿಲ್ ತಂದೆ ಎಚ್.ಡಿ. ಕುಮಾರಸ್ವಾಮಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಈಗ ಚುನಾವಣೆ ಮತ್ತು ಫಲಿತಾಂಶದ ಕುರಿತು ಚರ್ಚಿಸಿದರೆ ಯಾವುದೇ ಪ್ರಯೋಜನವಿಲ್ಲ. ಈ ಫಲಿತಾಂಶವನ್ನು ಒಪ್ಪಿಕೊಳ್ಳಲೇಬೇಕಿದೆ ಎಂದು ಹೇಳಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ 25,413 ಮತಗಳ ಅಂತರದಿಂದ ಸೋತಿದ್ದು, ಇದು ಅವರಿಗೆ ಇದು ಸತತ ಮೂರನೇ ಸೋಲಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ವಿರುದ್ಧ ಮೊದಲ ಬಾರಿಗೆ ನಿಖಿಲ್ ಸೋಲು ಕಂಡಿದ್ದರು. ಇದಾದ ಬಳಿಕ 2023ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿ ಎರಡನೇ ಬಾರಿ ಸೋತಿದ್ದರು.