ತುಮಕೂರು: ಶಿವಕುಮಾರ ಸ್ವಾಮೀಜಿ ೬ನೇ ವರ್ಷದ ಸಂಸ್ಮರಣೋತ್ಸವ ಕಾರ್ಯಕ್ರಮ ಸಿದ್ಧಗಂಗಾ ಮಠದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು.
ಶಿವಕುಮಾರ ಸ್ವಾಮೀಜಿಗೆ ನಮನ ಸಲ್ಲಿಸಲು ನಾಡಿನಾದ್ಯಂತ ಅಪಾರ ಸಂಖ್ಯೆಯ ಭಕ್ತರು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು. ಮಠದಲ್ಲಿ ಬೆಳಗ್ಗೆ ೫ ಗಂಟೆಯಿಂದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು. ಮೊದಲಿಗೆ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಪೂಜೆ ಸಲ್ಲಿಕೆಯಾದ ನಂತರ ರುದ್ರಾಕ್ಷಿ ಮಂಟಪದಲ್ಲಿ ಸ್ವಾಮೀಜಿ ಮೂರ್ತಿಯ ಮೆರವಣಿಗೆ ನಡೆಯಿತು.
ಸಾಹಿತಿ ಗೊ.ರು.ಚನ್ನಬಸಪ್ಪ ಅವರಿಗೆ `ಸಿದ್ಧಗಂಗಾಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾ ಯಿತು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಶಿವಸಿದ್ದೇಶ್ವರ ಸ್ವಾಮೀಜಿ, ಶ್ರವಣಬೆಳಗೊಳದ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕೇಂದ್ರ ಸಚಿವ ವಿ.ಸೋಮಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಬಿ.ಸುರೇಶ್‌ಗೌಡ, ಬಿ.ಜಿ.ಜ್ಯೋತಿಗಣೇಶ್ ಪಾಲ್ಗೊಂಡಿದ್ದರು. ಶ್ರೀಗಳ ೬ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಶ್ರೀಮಠದ ೬ ಕಡೆಗಳಲ್ಲಿ ಲಕ್ಷಾಂತರ ಭಕ್ತಾದಿಗಳಿಗಾಗಿ ಬಗೆ ಬಗೆಯ ಖಾದ್ಯಗಳೊಂದಿಗೆ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.