ಬಳ್ಳಾರಿ: ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಅಖಿಲ ಭಾರತ ೮೮ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಕನ್ನಡದ ನಾಡು-ನುಡಿ, ಭಾಷಾಭಿಮಾನ, ಕನ್ನಡದ ಅಸ್ಮಿತೆಯನ್ನು ಇನ್ನಷ್ಟು ಬೆಳೆಸುವ ನಿಟ್ಟಿನಲ್ಲಿ ಕನ್ನಡದ ತೇರನ್ನು ಎಳೆಯಲು ಎಲ್ಲರೂ ಕಂಕಣಬದ್ಧರಾಗಿ ಸಿದ್ಧರಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಕರೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಮಂಗಳವಾರ ಅಖಿಲ ಭಾರತ ೮೮ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಯ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಮುಖ್ಯವಾಗಿ ಸಮ್ಮೇಳನಗಳಲ್ಲಿ ಕನ್ನಡ ನಾಡು ನುಡಿಗೆ ಸಂಬಂಧಿಸಿದಂತೆ, ಭಾಷೆ ಬೆಳವಣಿಗೆ, ಗಡಿ ಭಾಗದ ಶಾಲಾ ವಿಚಾರಗಳ ಸಂಬಂಧಿಸಿದಂತೆ ಹಲವು ನಿರ್ಣಯಗಳನ್ನು ತೆಗೆದುಕೊಂಡು ಸರ್ಕಾರದ ಮುಂದಿಡಲಾಗುತ್ತದೆ.
ನಂತರದ ೧೨ ವರ್ಷಗಳ ನಂತರ ಮೂರನೇ ಬಾರಿಗೆ ೧೯೩೮ರ ಡಿ. ೨೯ ರಿಂದ ೩೧ರ ವರೆಗೆ ೨೩ನೇ ಕನ್ನಡ ಸಾಹಿತ್ಯ ಸಮ್ಮೇಳನ ರಂಗನಾಥ್ ದಿವಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು. ನಾಲ್ಕನೇ ಬಾರಿಗೆ ಹರಪನಹಳ್ಳಿಯಲ್ಲಿ ೧೯೪೭ ರಲ್ಲಿ ಸಿ.ಕೆ.ವೆಂಕಟರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಳಿಕ ೧೧ ವರ್ಷಗಳ ನಂತರ ೧೯೫೮ ರ ಜ. ೧೮ರಿಂದ ೨೦ರ ವರೆಗೆ ವಿನಾಯಕ್ ಕೃಷ್ಣ ಗೋಕಾಕ್ ಅವರ ಅಧ್ಯಕ್ಷತೆಯಲ್ಲಿ ಬಳ್ಳಾರಿ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ೫ನೇ ಬಾರಿಗೆ ನಡೆಯಿತು. ಈಗ ೬೭ ವರ್ಷದ ಬಳಿಕ ಮರಳಿ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರೆತಿದೆ. ೨೦೨೫ ರ ಡಿಸೆಂಬರ್ ಮಾಹೆಯಲ್ಲಿ ಅಖಿಲ ಭಾರತ ೮೮ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಇಂದಿನ ಪೀಳಿಗೆಗೆ ಮತ್ತು ಯುವ ಸಮುದಾಯಕ್ಕೆ ಕನ್ನಡ ಸಾಹಿತ್ಯ ಬಗೆಗಿನ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ ಮಾಹೆಯಲ್ಲಿ ಬಳ್ಳಾರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ ಎಂದರು. ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲಾಗುತ್ತಿರುವ ಅಖಿಲ ಭಾರತ ೮೮ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಳ್ಳಾರಿ ಜಿಲ್ಲೆಯ ಮೊದಲ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಸರ್ ಥಾಮಸ್ ಮುನ್ರೋ ಅವರ ಕುಟುಂಬಸ್ಥರನ್ನು ವಿಶೇಷ ಆಹ್ವಾನಿತರನ್ನಾಗಿ ಆಹ್ವಾನಿಸಲಾಗುವುದು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿರುವ ಅಖಿಲ ಭಾರತ ೮೮ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಮತ್ತು ಅಚ್ಚು-ಕಟ್ಟಾಗಿ ಆಯೋಜಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ ಶೋಭಾರಾಣಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಪಟೇಲ್ ಪಾಂಡು, ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.