ಬೆಂಗಳೂರು ಗ್ರಾಮಾಂತರ ಇನ್ನು ಬೆಂಗಳೂರು ಉತ್ತರ ಜಿಲ್ಲೆ: ಸಂಪುಟ ಒಪ್ಪಿಗೆ

0
71

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರು ಬದಲಾವಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇದೇ ಮೊದಲ ಬಾರಿಗೆ ನಂದಿ ಬೆಟ್ಟದಲ್ಲಿ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ಚಿಕ್ಕಬಳ್ಳಾಪುರದಲ್ಲಿ ನಡೆಯಿತು.

ಈ ಸಚಿವ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರು ಬದಲಾವಣೆ ಮಾಡಲು ಅನುಮೋದನೆ ನೀಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣವನ್ನು’ಭಾಗ್ಯ ನಗರ’ ಎಂದು ಹೆಸರು ಬದಲಾವಣೆ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳಿಗೆ ವಿವರಣೆ ನೀಡಿದ್ದಾರೆ.

ಸಂಪುಟ ಸಭೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ ಹೆಸರು ಇಡಲು ಸಹ ಒಪ್ಪಿಗೆ ಕೊಡಲಾಗಿದೆ. ಎತ್ತಿನ ಹೊಳೆ ಯೋಜನೆಯಲ್ಲಿ ನೀರಾವರಿ ಒದಗಿಸುವ ಕಾಮಗಾರಿಯನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಿ ಯೋಜನೆ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಿಗೆ ನೀರು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೆಲವು ದಿನಗಳ ಹಿಂದೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿತ್ತು. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಜಿಲ್ಲೆಯ ಶಾಸಕರ ಒತ್ತಾಯದಂತೆ ಹೆಸರು ಬದಲಾವಣೆ ಮಾಡಲಾಗಿತ್ತು. ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಎಂದು ಬದಲಾವಣೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಎಂದು ಬದಲಾವಣೆ ಮಾಡಬಹುದು ಎಂದು ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಜಿಲ್ಲೆಯಲ್ಲಿ ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಹೊಸಕೋಟೆ ತಾಲೂಕುಗಳಿವೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಹೆಸರು ಬದಲಾವಣೆ ಒಪ್ಪಿಗೆ ಸಿಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು.

1986ರ ಜುಲೈ 31ರಂದು ಬೆಂಗಳೂರು ಜಿಲ್ಲೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಪ್ರತ್ಯೇಕಿಸಲಾಗಿತ್ತು. ಆಗ ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳನ್ನು ಜಿಲ್ಲೆ ಒಳಗೊಂಡಿತ್ತು.

ಆದರೆ 2007ರ ಆಗಸ್ಟ್ 3ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ವಿಭಜನೆ ಮಾಡಲಾಗಿತ್ತು. ಆಗ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ತಾಲೂಕುಗಳು ರಾಮನಗರ ಇಂದಿನ ಬೆಂಗಳೂರು ದಕ್ಷಿಣ ಜಿಲ್ಲೆಯ ವ್ಯಾಪ್ತಿಗೆ ಸೇರಿದವು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಜಿಲ್ಲಾ ಕೇಂದ್ರ ಯಾವುದು? ಎಂಬುದು ಗೊಂದಲಕ್ಕೆ ಕಾರಣವಾಗಿತ್ತು. ಜಿಲ್ಲಾ ಕೇಂದ್ರವಿಲ್ಲದ ಏಕೈಕ ಜಿಲ್ಲೆ ಇದಾಗಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ಹೆಸರು ಬದಲಾವಣೆ ಮಾಡಿದರೆ ಅದು ಬ್ರಾಂಡ್ ಆಗಿ, ಅಭಿವೃದ್ಧಿಯಾಗಲಿದೆ ಎಂಬುದು ಸರ್ಕಾರದ ನಿರೀಕ್ಷೆಯಾಗಿದೆ.

Previous articleಶಾಲಾ ಕ್ರೀಡಾಂಗಣಕ್ಕೆ ಮಂಜೂರಾದ 10 ಕೋಟಿ ಬಿಡುಗಡೆಗೆ ಸೂಚನೆ
Next articleಕುಳಗೇರಿ ಕ್ರಾಸ್‌ನಲ್ಲಿ ಆಧಾರ್‌ಗಾಗಿ ಅಲೇದಾಟ…