ಕರ್ನಾಟಕ ಹವಾಮಾನ: ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ, ಆರೆಂಜ್ ಅಲರ್ಟ್, ಶಾಲೆಗಳಿಗೆ ರಜೆ

0
117

ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ, ರಾಜ್ಯಾದಂತ ಮಳೆ ಇರಲಿದ್ದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಪುತ್ತೂರು, ಕಡಬ, ಮುಲ್ಕಿ ಹಾಗೂ ಮೂಡಬಿದಿರೆ ತಾಲೂಕುಗಳ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ, ಆಯಾ ತಾಲೂಕುಗಳ ತಹಶೀಲ್ದಾರರು ಆದೇಶ ನೀಡಿದ್ದಾರೆ.

ಉಡುಪಿ ಜೆಲ್ಲೆಯಲ್ಲಿ 3 ದಿನ ರೆಡ್ ಅಲರ್ಟ್ ಘೋಷಣೆಯಾಗಿದ್ದು ಜುಲೈ 29ರವರೆಗೂ ಭಾರೀ ಮಳೆ ಸಾಧ್ಯತೆಯಿದೆ, ಉಡುಪಿ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗುರುವಾರ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಹಾಗು ಐಟಿಐಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಕಾಲೇಜಿಗೆ ರಜೆ ಇರುವುದಿಲ್ಲ.

ಆರೆಂಜ್ ಅಲರ್ಟ್​: ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೈಸೂರು, ದಾವಣಗೆರೆ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕದಾದ್ಯಂತ ಮಳೆ ಚುರುಕಾಗಿದ್ದು. ಇಂದಿನಿಂದ 4 ದಿನಗಳ ಕಾಲ ಭಾರಿ ಮಳೆಯಾಗಲಿದೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಗುರುವಾರ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮೀನುಗಾರಿಕೆಗೆ ತೆರಳದಂತೆ ಸೂಚನೆ : ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರಿ ಮಳೆ ಹಿನ್ನಲೆಯಲ್ಲಿ ಅರಬ್ಬಿ ಸಮುದ್ರ ಪ್ರಕ್ಷುಬ್ಧವಾಗಿದೆ. ಆದ್ದರಿಂದ ಅನಾಹುತ ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಕೂಡ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಸೂಚನೆ ನೀಡಿದ್ದಾರೆ.

ನಿರಂತರ ಮಳೆಯಿಂದಾಗಿ ಅಲ್ಲಲ್ಲಿ ಭೂ ಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದ್ದು. ನೀರು ಇರುವ ತಗ್ಗು ಪ್ರದೇಶಗಳು, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು ಎಂದು ತಿಳಿಸಲಾಗಿದೆ. ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿ, ತೋಡುಗಳ ಮತ್ತು ವಿದ್ಯುತ್ ಕಂಬ, ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

Previous articleಬ್ರಿಟನ್ ತಲುಪಿದ ಪ್ರಧಾನಿ ಮೋದಿ: ಮಹತ್ವದ ದ್ವಿಪಕ್ಷೀಯ ಒಪ್ಪಂದ ನಿರೀಕ್ಷೆ
Next articleNamma Metro: ಹಳದಿ ಮಾರ್ಗಕ್ಕೆ 4ನೇ ರೈಲು ಆಗಮನಕ್ಕೆ ದಿನಗಣನೆ

LEAVE A REPLY

Please enter your comment!
Please enter your name here