ಬೆಂಗಳೂರು, ಹಾಸನ ಸೇರಿ ಹಲವು ಕಡೆ ಲೋಕಾಯುಕ್ತ ದಾಳಿ

0
202

ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಮತ್ತು ಭ್ರಷ್ಟಾಚಾರ ಆರೋಪದ ಮೇಲೆ ಚಿತ್ರದುರ್ಗ, ಹಾಸನ, ಕೊಡಗು, ಚಿಕ್ಕಬಳ್ಳಾಪುರ, ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತರು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯಲ್ಲಿರುವ ಮನೆ ಹಾಗೂ ಆದಿವಾಲ ಗ್ರಾಮದ ಮನೆ ಮತ್ತು ಕ್ಲಿನಿಕ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಇಂಜಿನಿಯರ್ ಎಂ.ಆಂಜನೇಯಮೂರ್ತಿ ಮನೆ, ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಎಂ.ಆಂಜನೇಯಮೂರ್ತಿ ಗೌರಿಬಿದನೂರು ತಾಲೂಕಿನ ಕಿರಿಯ ಇಂಜಿನಿಯರ್ ಆಗಿದ್ದಾರೆ.

ಆಂಜನೇಯಮೂರ್ತಿಗೆ ಸೇರಿದ ಯಲಹಂಕದ ಮನೆ, ಜಕ್ಕೂರು ಕಾಂಪ್ಲೆಕ್ಸ್, ತುಮಕೂರು, ಮಧುಗಿರಿ ಸೇರಿದಂತೆ ಗೌರಿಬಿದನೂರು ಕಚೇರಿಗಳ ಮೇಲೆಯೂ ದಾಳಿ ನಡೆದಿದೆ. 4 ತಂಡಗಳಾಗಿ ಲೋಕಾಯುಕ್ತ ಅಧಿಕಾರಿಗಳು ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್​​​ಪಿ ಜೆಕೆ ಆ್ಯಂಟೊಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಾಸನ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ಮನೆ ಸೇರದಂತೆ ಒಟ್ಟು 5 ಕಡೆಗಳಲ್ಲಿ ದಾಳಿ ನಡೆದಿದೆ. ಫಾರಂ ಹೌಸ್ ಸೇರದಂತೆ ಲೋಕೋಪಯೋಗಿ ಭವನದಲ್ಲಿರುವ ಜಯಣ್ಣರ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿಯೂ ಸಹ ದಾಳಿ ಮಾಡಲಾಗಿದೆ. ಕಂದಾಯ ಅಧಿಕಾರಿ ವೆಂಕಟೇಶ್, ಬಿಡಿಎ ಕಚೇರಿಯ ಸಿನಿಯರ್ ಅರ್ಟಿಕಲ್ಚರ್ ಡೈರೆಕ್ಟರ್, ಓಂ ಪ್ರಕಾಶ್‌, ಸೇರದಂತೆ ಆರೋಗ್ಯ ವಿಭಾಗದ ಅಧಿಕಾರಿಗಳು ಹಾಗೂ ಸರ್ಕಾರಿ ಇಂಜಿನಿಯರ್‌ಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಮೈಸೂರು, ಕೊಪ್ಪಳ ಸೇರಿದಂತೆ ಅನೇಕ ಕಡೆಗಳಲ್ಲಿ ಆರೋಪ ಕೇಳಿ ಬಂದ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದರು.

Previous articleಮೋದಿ-ಟ್ರಂಪ್ ನಡುವೆ “ಕದನ ವಿರಾಮ” ಸಂಭಾಷಣೆ ನಡೆದಿಲ್ಲ: ಜೈಶಂಕರ್ ಸ್ಪಷ್ಟನೆ
Next articleNamma Metro: ನಮ್ಮ ಮೆಟ್ರೋ ಹಳದಿ ಮಾರ್ಗ, ಹೊರಟಿತು 4ನೇ ರೈಲು

LEAVE A REPLY

Please enter your comment!
Please enter your name here