ಬೆಂಗಳೂರು: ಕರ್ನಾಟಕದ ಜನರಿಗೆ ಸಿಹಿಸುದ್ದಿ. ನಮ್ಮ ಮೆಟ್ರೋ ಹಳದಿ ಮಾರ್ಗದ ಜೊತೆಗೆ ರಾಜ್ಯಕ್ಕೆ 11ನೇ ವಂದೇ ಭಾರತ್ ರೈಲು ಸಿಕ್ಕಿದೆ. ಹಲವು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಬೇಡಿಕೆ ಇದೆ. ಈಗ 11ನೇ ರೈಲು ಸಂಚಾರದ ಕುರಿತು ನೈಋತ್ಯರ ರೈಲ್ವೆ ಮಾಹಿತಿ ನೀಡಿದೆ.
ನೈಋತ್ಯ ರೈಲ್ವೆ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಗೆಟ್ ರೆಡಿ ಕರ್ನಾಟಕ. 11ನೇ ವಂದೇ ಭಾರತ್ ರೈಲು ಸಂಚಾರ ಎಂದು ಹೇಳಿದೆ. ಕರ್ನಾಟಕದ ರಾಜಧಾನಿಯನ್ನು ಈ ರೈಲು ಕರ್ನಾಟಕದ ಐತಿಹಾಸಿಕ ನಗರಕ್ಕೆ ಸಂಪರ್ಕ ಕಲ್ಪಿಸಲಿದೆ ಎಂದು ಹೇಳಿದೆ.
ಆಗಸ್ಟ್ 10ರಂದು ಬೆಂಗಳೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ನಮ್ಮ ಮೆಟ್ರೋ ಹಳದಿ ಮಾರ್ಗದ ಆರ್.ವಿ.ರಸ್ತೆ-ಬೊಮ್ಮಸಂದ್ರ ನಡುವಿನ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ.
ಕರ್ನಾಟಕದಲ್ಲಿ ವಂದೇ ಭಾರತ್ ರೈಲಿಗೆ ಭಾರೀ ಬೇಡಿಕೆ ಇದೆ. ಇದರದಲ್ಲಿ ಬೆಂಗಳೂರು-ಬೆಳಗಾವಿ ನಡುವಿನ ವಂದೇ ಭಾರತ್ ರೈಲು ಸಂಚಾರದ ಪ್ರಾಯೋಗಿಕ ಪರೀಕ್ಷೆಯೂ 2023ರ ನವೆಂಬರ್‌ನಲ್ಲಿಯೇ ಮುಕ್ತಾಯಗೊಂಡಿದೆ. ಆದರೆ ರೈಲು ಸೇವೆ ಇನ್ನೂ ಆರಂಭವಾಗಿಲ್ಲ.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ, ‘ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಬೇಕೆಂದು ಮಾನ್ಯ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು’ ಎಂದು ಹೇಳಿದ್ದರು.
‘ಈ ಭಾಗದ ಜನದಟ್ಟಣೆಯನ್ನು ಅರಿತು ಶ್ರೀ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ಈ ರೈಲು ಸಂಚಾರದ ಅಧಿಕೃತ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ತಿಳಿಸಲಾಗುವುದು’ ಎಂದು ಪೋಸ್ಟ್ ಹಾಕಿದ್ದರು.
‘ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿರುವ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀಯವರಿಗೆ ಹಾಗೂ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ’ ಎಂದು ವಿ.ಸೋಮಣ್ಣ ತಿಳಿಸಿದ್ದರು.
ಕೆಎಸ್ಆರ್ ಬೆಂಗಳೂರು-ಧಾರವಾಡ ನಡುವೆ ವಯಾ ಹುಬ್ಬಳ್ಳಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ನಡೆಸುತ್ತಿದೆ. ಈ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಬೇಕು ಎಂಬುದು ಬೇಡಿಕೆಯಾಗಿತ್ತು. ಅಲ್ಲದೇ ಬೆಂಗಳೂರು-ಬೆಳಗಾವಿ ನಡುವೆ ಹೊಸ ವಂದೇ ಭಾರತ್ ರೈಲು ಓಡಿಸಬೇಕು ಎಂದು ಬೇಡಿಕೆ ಇಡಲಾಗಿತ್ತು.
ಕೆಎಸ್ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ತುಮಕೂರು, ದಾವಣಗೆರೆ, ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ನಿಲುಗಡೆ ಹೊಂದಿದೆ. ಈ ರೈಲಿನ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ, ಬೆಳಗಾವಿ ತನಕ ವಿಸ್ತರಣೆ ಮಾಡಲಾಗುತ್ತದೆ ಎಂಬುದು ಈ ಹಿಂದೆ ಕೇಳಿ ಬಂದ ಸುದ್ದಿಯಾಗಿತ್ತು.
ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂದು ಸಂಸದ ಜಗದೀಶ್ ಶೆಟ್ಟರ್, ನೈಋತ್ಯ ರೈಲ್ವೆ, ಪ್ರಧಾನಿ ನರೇಂದ್ರ ಮೋದಿಗೆ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಹಲವು ಬಾರಿ ಮನವಿ ಮಾಡಲಾಗಿತ್ತು.