ಧಾರವಾಡ: ಧಾರವಾಡ ಜಿಲ್ಲೆಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಈ ಕೊಡುಗೆ ನೀಡಿದೆ. ಸ್ವಾತಂತ್ರ್ಯ ದಿನಾಚರಣೆ-2025ರ ಹೊತ್ತಿನಲ್ಲಿಯೇ ಈ ವಿಶೇಷ ಕೊಡುಗೆ ನೀಡಲಾಗಿದೆ.
ಧಾರವಾಡ ಜಿಲ್ಲೆಯ ಇಟ್ಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SEZ) ಘೋಷಣೆ ಮಾಡಲಾಗಿದೆ. 28 ಎಕರೆ ಪ್ರದೇಶದಲ್ಲಿ ವಿಶೇಷ ಆರ್ಥಿಕ ವಲಯ ಸ್ಥಾಪನೆ ಮಾಡಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.
ಈ ಕುರಿತು ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರ 79ನೇ ಸ್ವಾತಂತ್ರ‍್ಯೋತ್ಸವ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆಯ ವಿಶಿಷ್ಟ ಕೊಡುಗೆ ನೀಡಿದೆ ಎಂದು ಹೇಳಿದ್ದಾರೆ.
ಯೋಜನೆಯ ವಿವರಗಳು: ಧಾರವಾಡ ಜಿಲ್ಲೆಯ ಇಟ್ಟಿಗಟ್ಟಿಯಲ್ಲಿ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿತ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯವನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಎಲೆಕ್ಟ್ರಾನಿಕ್ಸ್ ಘಟಕಗಳ ಅವಶ್ಯಕತೆಯನ್ನು ಮನಗಂಡು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಟ್ಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ ಘೋಷಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದ್ದರು.
ಪ್ರಹ್ಲಾದ್ ಜೋಶಿ ಮನವಿಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ವಿಶೇಷ ಆರ್ಥಿಕ ವಲಯವನ್ನು ಘೋಷಣೆ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಒಟ್ಟು 391 ಎಕರೆ ಭೂಮಿ ಹೊಂದಿರುವ ಏಕಾಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್‌ನಲ್ಲಿ ಈಗ 28 ಎಕರೆ ಭೂಮಿಯನ್ನು ಎಲೆಕ್ಟ್ರಾನಿಕ್ಸ್ ವಿಶೇಷ ಆರ್ಥಿಕ ವಲಯ ಎಂದು ಘೋಷಿಸಲಾಗಿದೆ.
ಉತ್ತರ ಕರ್ನಾಟಕ ಅದರಲ್ಲಿಯೂ ವಿಶೇಷವಾಗಿ ಹುಬ್ಬಳ್ಳಿ-ಧಾರವಾಡ ಕೈಗಾರಿಕೋದ್ಯಮಿಗಳಿಗೆ ಇದು ಸಂತಸದ ವಿಷಯ ಎಂದು ಸಚಿವ ಜೋಶಿ ಪ್ರತಿಕ್ರಿಯಿಸಿದ್ದಾರೆ. ಉತ್ತರ ಕರ್ನಾಟಕ ಭಾಗಕ್ಕೆ ಬರುವ ದಿನಗಳಲ್ಲಿ ಹೊಸ ಎಲೆಕ್ಟ್ರಾನಿಕ್ಸ್ ಉದ್ಯಮಗಳು ಬಂದಂತೆ ವಿಶೇಷ ಆರ್ಥಿಕ ವಲಯದ ವಿಸ್ತರಣೆ ಮಾಡುವ ಅವಕಾಶವಿದೆ.
ಹುಬ್ಬಳ್ಳಿ-ಧಾರವಾಡದ ಕೈಗಾರಿಕಾ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಗೆ ಈ ವಿಶೇಷ ಆರ್ಥಿಕ ವಲಯ ಉತ್ತೇಜನ ನೀಡಲಿದೆ. ಕೇಂದ್ರ ಸರ್ಕಾರದ ಕ್ರಮ ಹುಬ್ಬಳ್ಳಿಯನ್ನು ಎಲೆಕ್ಟ್ರಾನಿಕ್ಸ್, ಜಾಗತಿಕ ಎಲೆಕ್ಟ್ರಾನಿಕ್ಸ್ ಉತ್ಪಾದನೆಯ ಶಕ್ತಿಕೇಂದ್ರವಾಗಿ ಪರಿವರ್ತಿಸುವ ನಿರ್ಣಾಯಕ ಹೆಜ್ಜೆಯಾಗಲಿದೆ.
ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ ಘೋಷಿಸಿದ್ದಕ್ಕೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್‌ಗೆ ಹಾಗೂ ಕರ್ನಾಟಕದ ವಾಣಿಜ್ಯ, ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ.ಬಿ.ಪಾಟೀಲ್‌ಗೆ ಸಚಿವ ಜೋಶಿ ಧ್ಯನವಾದ ತಿಳಿಸಿದ್ದಾರೆ.
ವಿಶೇಷ ಆರ್ಥಿಕ ವಲಯ ಕಾಯ್ದೆ 2005ರಲ್ಲಿ ಜಾರಿಗೆ ಬಂದಿತು. ಇದಕ್ಕೂ ಮೊದಲು ಕೇಂದ್ರ ಸರ್ಕಾರದ 7 ವಿಶೇಷ ಆರ್ಥಿಕ ವಲಯಗಳು ಮತ್ತು 11 ರಾಜ್ಯ/ ಖಾಸಗಿ ವಲಯದ ಆರ್ಥಿಕ ವಲಯದ ಜೊತೆಗೆ 524 ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿತ್ತು.
ವಿಶೇಷ ಆರ್ಥಿಕ ವಲಯಗಳಿಗೆ ಹಣಕಾಸಿನ ರಿಯಾಯಿತಿಗಳು ಮತ್ತು ಸುಂಕದ ಪ್ರಯೋಜನಗಳನ್ನು ನೀಡಲಾಗುತ್ತದೆ. ಈ ವಿನಾಯಿತಿಗಳು ಎಲ್ಲಾ ಅರ್ಥಿಕ ವಲಯಗಳಿಗೆ ಏಕರೂಪವಾಗಿ ಅನ್ವಯಿಸುತ್ತವೆ ಮತ್ತು ರಫ್ತಿಗೆ ಪ್ರೋತ್ಸಾಹಕಗಳ ಸ್ವರೂಪದಲ್ಲಿರುತ್ತವೆ. ಸರ್ಕಾರದ ರಫ್ತು ಉತ್ತೇಜನ ಉಪಕ್ರಮಗಳಿಗೆ ಮಾರ್ಗದರ್ಶನ ನೀಡುವ ತತ್ವಗಳಿಗೆ ಅನುಗುಣವಾಗಿರುತ್ತವೆ.