ಹಾಸನ ಜಿಲ್ಲೆಯ ಬಹು ವರ್ಷಗಳ ನಿರೀಕ್ಷೆಯಾದ ಹಾಸನ ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು 63.34 ಕೋಟಿ ರೂ. ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದರಿಂದಾಗಿ ಜಿಲ್ಲೆ ಸೇರಿದಂತೆ 5 ಜಿಲ್ಲೆಯ ಜನರಿಗೆ ಹೃದಯ ಹಾಗೂ ಮೆದುಳು ಚಿಕಿತ್ಸೆಗೆ ಅನುಕೂಲವಾಗಿದೆ.
ಸಚಿವ ಕೃಷ್ಣ ಬೈರೇಗೌಡರು ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡ ತಿಂಗಳೊಳಗೆ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಗೆ ಹೆಚ್ಚುವರಿಯಾಗಿ ಹಣ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿ ಆಗಿರುವುದು ಜಿಲ್ಲೆಯ ಜನರ ಸಂತಸಕ್ಕೆ ಕಾರಣವಾಗಿದೆ.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದಯ ಹಾಗೂ ಮೆದುಳು ಸಮಸ್ಯೆಗೆ ಚಿಕಿತ್ಸೆ ನೀಡಲಾಗುತ್ತದೆ. ಈಗಾಗಲೇ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದರೂ ಚಿಕಿತ್ಸೆಗೆ ಬೇಕಾದ ವೈದ್ಯಕೀಯ ಪರಿಕರಗಳು, ಲ್ಯಾಬ್, ಮಾನವ ಸಂಪನ್ಮೂಲ ಹಾಗೂ ತಜ್ಞವೈದ್ಯರ ನೇಮಕಾತಿಗೆ ಹೆಚ್ಚುವರಿಯಾಗಿ 60 ಕೋಟಿ ರೂ. ಬೇಕಾಗುತ್ತದೆ ಎಂದು ಡಿಪಿಆರ್ ಅನ್ನು ಸಂಸ್ಥೆಯ ನಿರ್ದೇಶಕ ರಾಜಣ್ಣ ಅವರು ಸರ್ಕಾರಕ್ಕೆ ಸಲ್ಲಿಸಿದ್ದರು.
ಸ್ಥಳೀಯ ಜನಪ್ರತಿನಿಧಿಗಳು ಕೂಡ ಈ ಸಂಬಂಧ ಸರ್ಕಾರದ ಗಮನ ಸೆಳೆದಿದ್ದರು. ಇದೀಗ ಕೃಷ್ಣ ಬೈರೇಗೌಡರು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತಂದು ಹಣ ಬಿಡುಗಡೆಗೆ ಅನುಮೋದನೆ ಕೊಡಿಸಿದ್ದಾರೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗುವುದರಿಂದ ಬಡ ಜನರಿಗೆ ಉಚಿತವಾಗಿ ಹೃದಯ ಮತ್ತು ಮೆದುಳಿಗೆ ಸಂಬಂಧಿಸಿದ ಚಿಕಿತ್ಸೆ ದೊರೆಯಲಿದೆ.
ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, “ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಉದ್ದೇಶಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಸ್ಥಾಪನೆಯನ್ನು ಈ ಹಿಂದೆಯೇ ಆರಂಭಿಸಲಾಗಿತ್ತು. ಆದರೆ ಅಗತ್ಯ ಅನುದಾನ ಕೊರತೆಯಿಂದ ಕಾಮಗಾರಿ ಪೂರ್ಣಗೊಂಡಿಲ್ಲ. ಈ ವಿಷಯವನ್ನು ನನ್ನ ಗಮನಕ್ಕೆ ತಂದಾಗ ನಾನು ಸಿಎಂ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದೆ. ಅದರಂತೆ ಸಂಪುಟ ಸಭೆ 63.34 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಿರುವುದು ಸಂತಸದ ವಿಚಾರ. ಶೀಘ್ರದಲ್ಲೇ ಹಾಸನ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಸಂಪೂರ್ಣವಾಗಿ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುತ್ತದೆ” ಎಂದು ಹೇಳಿದ್ದಾರೆ.
“ಇತ್ತೀಚೆಗೆ ಹಾಸನದಲ್ಲಿ ಸರಣಿ ಹೃದಯಾಘಾತಗಳಿಂದ ಸಾವುಗಳು ಸಂಭವಿಸಿದಾಗ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ತುರ್ತು ಅವಶ್ಯಕತೆಯನ್ನು ಈ ಬಗ್ಗೆ ಕಂದಾಯ ಸಚಿವರು ಮತ್ತು ಮುಖ್ಯಮಂತ್ರಿಗೆ ಮನವರಿಕೆ ಮಾಡಿಕೊಡಲಾಗಿತ್ತು. ಮನವಿಯನ್ನು ಪುರಸ್ಕರಿಸಿ ಇಂದು ಆಸ್ಪತ್ರೆಗೆ ಹಣ ಬಿಡುಗಡೆಯಾಗಿರುವುದು ಸಂತಸ ತಂದಿದೆ. ಈ ಅನುದಾನದಿಂದ ಆಸ್ಪತ್ರೆಯ ಬಾಕಿ ಉಳಿದಿರುವ ಕಾಮಗಾರಿಯು ಶೀಘ್ರವಾಗಿ ಪೂರ್ಣಗೊಳ್ಳಲಿದೆ” ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದ್ದಾರೆ.