ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಯನ್ನು ಸೆಪ್ಟೆಂಬರ್ 15ರಿಂದ ಕೈಗೊಳ್ಳಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ ಸಮೀಕ್ಷೆ ಪೋಸ್ಟರ್ ಬಿಡುಗಡೆಗೊಳಿಸಿದರು.
ಲಿಂಗತ್ವ ಅಲ್ಪಸಂಖ್ಯಾತರಿಂದಲೇ ಸಮೀಕ್ಷೆಗಾಗಿ ‘ಕರ್ಮಣಿ’ ಹೆಸರಿನ ವೆಬ್ ಅಪ್ಲಿಕೇಶನ್ ಸಿದ್ದಪಡಿಸಲಾಗಿದೆ. ಜಿಲ್ಲೆಯ ಎಲ್ಲಾ 4 ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಳಗ್ಗೆ 09 ರಿಂದ ಸಂಜೆ 06 ವರೆಗೆ ಸಮೀಕ್ಷೆ ನಡೆಸಲಾಗುತ್ತಿದ್ದು, ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಹತ್ತಿರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಬಹುದಾಗಿದೆ.
ಸಮೀಕ್ಷೆಗೆ ಚಾಲನೆ: ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ವಿಧಾನಸೌಧದಲ್ಲಿ ದೇಶದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಹಾಗೂ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಗಳ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಸಮೀಕ್ಷೆಗೆ ಚಾಲನೆ ನೀಡಿದ್ದರು.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಮೀಕ್ಷೆ ನಡೆಯುತ್ತಿದ್ದು, ಮೊದಲ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ನಡೆಯಲಿದೆ. ಸಮೀಕ್ಷೆಯಲ್ಲಿ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಸಮೀಕ್ಷೆಗಳನ್ನು ನಡೆಸಲಾಗುತ್ತಿದೆ.
ಲಿಂಗತ್ವ ಅಲ್ಪಸಂಖ್ಯಾತರ ಮತ್ತು ಮಾಜಿ ದೇವದಾಸಿ ಮಹಿಳೆಯರ ಅಹಾಯಕತೆಯನ್ನು ಹೋಗಲಾಡಿಸಲು ಹಾಗೂ ಸರ್ಕಾರದ ಸೌಲಭ್ಯಗಳನ್ನು ಅವರಿಗೆ ಒದಗಿಸಲು ಅವರ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಿದ್ದು, ಅದನ್ನು ಅರ್ಹರಿಗೆ ತಲುಪಿಸಲು ಇದು ಸಹಾಯಕವಾಗಲಿದೆ.
ದಮನಿತ ಮಹಿಳೆಯರ ಅಸಹಾಯಕತೆಯನ್ನು ಹೋಗಲಾಡಿಸುವುದು ಹಾಗೂ ಅವರ ಜೀವನದ ಮಟ್ಟ ಸುಧಾರಣೆ ತರುವ ತೃತೀಯ ಲಿಂಗಿಗಳನ್ನು ಗುರುತಿಸಿ, ಗುರುತಿನ ಚೀಟಿ ನೀಡುವುದು, ಸರ್ಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವುದು ಪ್ರಮುಖ ಗುರಿಯಾಗಿದೆ.
ಲಿಂಗತ್ವ ಅಲ್ಪಸಂಖ್ಯಾತರ ಮತ್ತು ಮಾಜಿ ದೇವದಾಸಿ ಮಹಿಳೆಯರ ಜೀವನಮಟ್ಟ ಸುಧಾರಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜೊತೆಗೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರು ಶೋಷಣೆಯಿಂದ ಒಳಗಾದಲ್ಲಿ ಮತ್ತು ಯಾವುದೇ ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಎಲ್ಲ ಇಲಾಖೆಗಳ ಕರ್ತವ್ಯವಾಗಿರುತ್ತದೆ.