ರಾಯಚೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರ ಬೆಳಗ್ಗೆಯಿಂದಲೇ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯವಸ್ಥೆಗೊಂಡಿದೆ. ಮುಂದಿನ ಎರಡು ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಗುರುವಾರ ರಾಯಚೂರು ತಾಲ್ಲೂಕಿನ ವ್ಯಾಪ್ತಿಯ ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಣೆ ಮಾಡಿದೆ.
ಗುರುವಾರ ಬೆಳಗಿನ ಜಾವದಿಂದ ರಾಯಚೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬೆಳಗ್ಗೆ ಎರಡೂವರೆ ಗಂಟೆಗಳ ಕಾಲ ಮಳೆ ಸುರಿದಿದೆ. ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಆದೇಶ ಮೇರೆಗೆ ಶಿಕ್ಷಣ ಇಲಾಖೆ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.
ಈಗ ಶಾಲೆಗಳಿಗೆ ನೀಡಿರುವ ರಜೆಯನ್ನು ಮುಂದಿನ ಎರಡು ಶನಿವಾರಗಳ ಕಾಲ ಪೂರ್ಣಾವಧಿ ತರಗತಿಗಳನ್ನು ನಡೆಸಿ ಸರಿದೂಗಿಸಬೇಕು ಎಂದು ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.