ಉದ್ಯಾನ ನಗರಿ, ಐಟಿ ಸಿಟಿ, ಗ್ರೇಟರ್ ಬೆಂಗಳೂರು ಈಗ ರಸ್ತೆ ಗುಂಡಿಗಳ ಕಾರಣಕ್ಕೆ ಸುದ್ದಿಯಲ್ಲಿದೆ. ಬೆಂಗಳೂರು ಅಭಿವೃದ್ಧಿಗೆ ಕರ್ನಾಟಕದ ಕಾಂಗ್ರೆಸ್ ಏನು ಮಾಡಿದೆ? ಎಂದು ಪ್ರಶ್ನಿಸಲಾಗುತ್ತಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುಂಡಿಗಳನ್ನು ಮುಚ್ಚುವ ಭರವಸೆ ನೀಡಿದ್ದಾರೆ.
ಕೇಂದ್ರ ಸಚಿವ, ಮಂಡ್ಯ ಸಂಸದ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು ನಗರದ ರಸ್ತೆ ಗುಂಡಿ ಸಮಸ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕುಮಾರಸ್ವಾಮಿ ಪೋಸ್ಟ್: ‘ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ’ ಎಂದು ಹೇಳಿದ್ದಾರೆ.
‘ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ?’ ಎಂದು ಪ್ರಶ್ನೆ ಮಾಡಿದ್ದಾರೆ.
‘ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ’ ಎಂದು ಹೇಳಿದ್ದಾರೆ.
‘ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ!’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು. ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ’ ಎಂದು ಕಿಡಿಕಾರಿದ್ದಾರೆ.
‘ಕಂಪನಿಗಳಿಗೆ ನನ್ನ ಮನವಿ ಇಷ್ಟೇ; ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ. We will Make Bengaluru Great Again’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.