ಬೆಂಗಳೂರಿನ ರಸ್ತೆ ಗುಂಡಿ ಸಮಸ್ಯೆ ಕುರಿತು ಸಾರ್ವಜನಿಕರ ಆಕ್ರೋಶ ಹೆಚ್ಚುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ರಸ್ತೆ ಗುಂಡಿಗಳು ಕೇವಲ ಬೆಂಗಳೂರಿಗೆ ಸೀಮಿತವಲ್ಲ. ನಾನು ದೆಹಲಿಗೆ ಹೋಗಿದ್ದಾಗ ಪ್ರಧಾನಿ ನಿವಾಸದ ಮುಂದಿರುವ ರಸ್ತೆಯಲ್ಲೂ ಗುಂಡಿಗಳನ್ನು ನೋಡಿದ್ದೇನೆ. ಈ ಸಮಸ್ಯೆ ಎಲ್ಲೆಡೆ ಇದೆ, ಆದರೆ ಬೆಂಗಳೂರನ್ನು ಮಾತ್ರ ಗುರಿಯಾಗಿಸಲಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.
ಇತ್ತೀಚೆಗೆ, ಬ್ಲಾಕ್‌ಬಕ್ ಸಿಇಒ ಬೆಂಗಳೂರಿನ ಸಂಚಾರ ದಟ್ಟಣೆ ಮತ್ತು ರಸ್ತೆ ಗುಂಡಿಗಳಿಂದ ಬೇಸತ್ತು ನಗರ ತೊರೆಯುವ ಬಗ್ಗೆ ಟ್ವೀಟ್ ಮಾಡಿದ್ದರು. ಆ ಟ್ವೀಟ್ ರಾಷ್ಟ್ರವ್ಯಾಪಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ಅಧಿಕಾರಿಗಳ ಸಭೆ ನಡೆಸಿ, ಗುಂಡಿ ಮುಚ್ಚಲು ಗಡುವು ನೀಡಿದ್ದರು. “ಒಂದು ಕಾರ್ಪೊರೇಷನ್ ವ್ಯಾಪ್ತಿಯಂತೆ ಪ್ರತಿದಿನ ಸುಮಾರು ಸಾವಿರ ಗುಂಡಿಗಳನ್ನು ಮುಚ್ಚುವ ಕೆಲಸ ನಡೆಯುತ್ತಿದೆ. ಮಳೆಯಿದ್ದರೂ ಕಾರ್ಯಚರಣೆ ತ್ವರಿತಗೊಂಡಿದೆ. ಶೀಘ್ರವೇ ರಸ್ತೆ ಗುಂಡಿಗಳಿಗೆ ಮುಕ್ತಿ ಸಿಗಲಿದೆ” ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದರು. ಐಟಿ ಕಂಪನಿಗಳು ಈ ಬಗ್ಗೆ ಗಮನಿಸಬೇಕು ಎಂದೂ ಅವರು ಮನವಿ ಮಾಡಿದರು.
ಚುನಾವಣೆ ಹತ್ತಿರ ಬರುತ್ತಿದ್ದಂತೆ ವಿರೋಧ ಪಕ್ಷಗಳು ರಸ್ತೆ ಗುಂಡಿ ಸಮಸ್ಯೆಯನ್ನು ದೊಡ್ಡದು ಮಾಡುತ್ತಿವೆ ಎಂದು ಅವರು ಆರೋಪಿಸಿದರು. “ಈ ಮುಂಚೆ ರಸ್ತೆ ಗುಂಡಿ ಯಾರಿಗೂ ಕಾಣುತ್ತಿರಲಿಲ್ಲ. ಈಗ ಚುನಾವಣೆ ಹತ್ತಿರ ಬರುತ್ತಿದೆ. ಹೀಗಾಗಿ ದೊಡ್ಡದಾಗಿ ಸಮಸ್ಯೆ ಕಾಣಿಸುತ್ತಿದೆ” ಎಂದು ಡಿಕೆಶಿ ಬಿಜೆಪಿ ವಿರುದ್ಧ ಕಿಡಿಕಾರಿದರು. ಸರ್ಕಾರ ರಸ್ತೆ ಗುಂಡಿಗಳಿಗೆ ಕಡಿವಾಣ ಹಾಕಲು ಬದ್ಧವಾಗಿದ್ದು, ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಪೂರ್ವ, ಪಶ್ಚಿಮ ನಗರಪಾಲಿಕೆ ವ್ಯಾಪ್ತಿಗಳಲ್ಲಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದು, “ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು. ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ಬೆಂಗಳೂರಿನ ರಸ್ತೆ ಗುಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ.