Namma Metro: ನಮ್ಮ ಮೆಟ್ರೋಗೆ ‘ಬಸವ ಮೆಟ್ರೋ’ ಎಂದು ನಾಮಕರಣ

0
141

Namma Metro. “ನಮ್ಮ ಮೆಟ್ರೋಗೆ ‘ಬಸವ ಮೆಟ್ರೋ’ ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ ಬಸವ ಮೆಟ್ರೋ ಎಂದು ಘೋಷಿಸಿ ಬಿಡುತ್ತಿದ್ದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ರ ಸಮಾರೋಪ ಸಮಾರಂಭದಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.

“ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು. ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ, ಬದ್ಧತೆ ಇಟ್ಟುಕೊಂಡಿದ್ದೇನೆ” ಎಂದರು.

“ಅಂದಿಗಲ್ಲ, ಇಂದಿಗಲ್ಲ, ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ” ಎಂದು ಹೇಳಿದರು.

“ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ. ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ” ಎಂದು ತಿಳಿಸಿದರು.

“ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದೆ” ಎಂದರು.

“ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯವಾದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ” ಎಂದು ಬಣ್ಣಿಸಿದರು.

“ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಆಗುತ್ತೇವೆ. ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

Previous articleಬಿಹಾರ ಚುನಾವಣೆಗೆ ದಿನಾಂಕ ನಿಗದಿ: ಕುತೂಹಲ ಮೂಡಿಸಿದ ರಾಜಕೀಯ ಕಣ!
Next articleಗಲೀಜು ಕೊಂಪೆಯಾಗುತ್ತಿರುವ ಗೋಕರ್ಣ: ಅಸಹಾಯಕ ಜನಪ್ರತಿನಿಧಿಗಳು, ಜನರ ಅಳಲು

LEAVE A REPLY

Please enter your comment!
Please enter your name here