ಹಾಸನಾಂಬೆ ಜಾತ್ರೆ: ಅ. 15ರಂದು ದೇವಾಲಯಕ್ಕೆ ಸಿಎಂ, ಡಿಸಿಎಂ

0
83

ಹಾಸನಾಂಬೆ ಜಾತ್ರೆ-2025ರ ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 8 ರಿಂದ 23ರ ತನಕ ಈ ಬಾರಿ ಹಾಸನ ನಗರದ ಅಧಿದೇವತೆ ಹಾಸನಾಂಬೆ ಭಕ್ತರಿಗೆ ದರ್ಶನವನ್ನು ನೀಡಲಿದ್ದಾರೆ.

ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಹಾಸನಾಂಬ ದೇವಿ ದರ್ಶನ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳವಾರ ದೇವಾಲಯಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿ ಕೆಲವು ಸಲಹೆ, ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಬಾರಿಯ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಯಶಸ್ವಿಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅ.15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೇವಿಯ ದರ್ಶನಕ್ಕೆ ಆಗಮಿಸಲಿದ್ದಾರೆ” ಎಂದು ತಿಳಿಸಿದರು.

“ವರ್ಷದಿಂದ ವರ್ಷಕ್ಕೆ ದೇವಿಯ ದರ್ಶನಕ್ಕೆ ಆಮಿಸುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಾರಿಯೂ ಕಳೆದ ಬಾರಿಗಿಂತ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಕಳೆದ ಬಾರಿ ಕೆಲವು ಗೊಂದಲಗಳಾಗಿದ್ದವು. ಈ ಬಾರಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗಿದೆ” ಎಂದರು.

“80 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಅಂಗವಿಕಲರಿಗೆ ನೇರ ದರ್ಶನ ವ್ಯವಸ್ಥೆ ಮಾಡಲಾಗಿದೆ. ಗಂಟೆಗೆ 6000 ಮಂದಿಯಂತೆ ಪ್ರತಿ ದಿನ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆಯಲು ಅನುಕೂಲವಾಗುವಂತೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದುಪಡಿಸಿದ್ದು, ಜತೆಗೆ ಶಿಷ್ಟಾಚಾರ ದರ್ಶನದಲ್ಲೂ ಹಲವು ಬದಲಾವಣೆ ಮಾಡಲಾಗಿದೆ” ಎಂದು ತಿಳಿಸಿದರು.

ಈ ಬಾರಿ ಹಾಸನಾಂಬ ಜಾತ್ರಾ ಮಹೋತ್ಸದಲ್ಲಿ ಮೊದಲ ಬಾರಿಗೆ ಜಾನಪದ ಜಾತ್ರಾ ಮಹೋತ್ಸವ, ವಸ್ತು ಪ್ರದರ್ಶನ, ಡಾಗ್ ಶೋ, ಪಾಕ ಸ್ಪರ್ಧೆ ಏರ್ಪಡಿಸಲಾಗಿದೆ. ಜತೆಗೆ ಹಿಂದಿನಂತೆ ಫಲ ಪುಷ್ಪ ಪ್ರದರ್ಶನ, ಪ್ರವಾಸೋದ್ಯಮ ಇಲಾಖೆಯಿಂದ ಟೂರ್ ಪ್ಯಾಕೇಜ್, ಹೆಲಿ ಟೂರಿಸಂ ಕೂಡ ಆಯೋಜಿಸಲಾಗಿದೆ.

ಈ ಬಾರಿ ವಿಶೇಷವಾಗಿ ಬಸ್‌ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದಲ್ಲಿ ಹಾಸನಾಂಬ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಪಾದರಕ್ಷೆ ಬಿಡಲು ವ್ಯವಸ್ಥೆ ಮಾಡಲಾಗಿದೆ. ಹಿರಿಯನಾಗರಿಕರು, ಅಂಗವಿಕಲರಿಗೆ ನೇರ ದರ್ಶನ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು-ಹಾಸನ ನಡುವ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ. ಹೊಸ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದಿಂದ ಬಸ್ ಸೌಕರ್ಯ ಕಲ್ಪಿಸಲಾಗಿದೆ. ಹಾಸನದ ಅಧಿದೇವತೆ ಶ್ರೀ ಹಾಸನಾಂಬ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಗುರುವಾರದಿಂದ ಆರಂಭವಾಗಲಿದೆ.

Previous articleZoho: ಹೊಸ ಇಮೇಲ್ ಐಡಿ ಹಂಚಿಕೊಂಡ ಅಮಿತ್ ಶಾ
Next articleಗತವೈಭವಕ್ಕೆ ವರ್ಣಮಾಲೆಗಳ ರಾಗಮಜ್ಜನ

LEAVE A REPLY

Please enter your comment!
Please enter your name here