ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ದೀಪಾವಳಿ ಕೊಡುಗೆ ಹೆಸರಿನಲ್ಲಿ, ‘ಎ ಖಾತಾ’ ಪರಿವರ್ತನೆ ಪ್ರಕ್ರಿಯೆಯ ಮೂಲಕ ಬೆಂಗಳೂರು ಜನರಿಂದ ಸುಮಾರು 15,000 ಕೋಟಿ ರೂಪಾಯಿ ಸುಲಿಗೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮಂಡ್ಯದಲ್ಲಿ ಆಟೋ ನಿಲ್ದಾಣ ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜನರು ದೀಪಾವಳಿ ಕೊಡುಗೆಯ ನಿರೀಕ್ಷೆಯಲ್ಲಿದ್ದರೆ, ಸರ್ಕಾರ ಅವರ ಜೇಬಿಗೆ ಕೈ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಬಿ ಖಾತಾ’ದಿಂದ ‘ಎ ಖಾತಾ’ಗೆ ಪರಿವರ್ತಿಸಲು 500 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಆದರೆ, ವಾಸ್ತವದಲ್ಲಿ 30×40 ನಿವೇಶನಗಳಿಗೆ 4 ಲಕ್ಷದಿಂದ 8 ಲಕ್ಷ ರೂಪಾಯಿಗಳವರೆಗೆ ಹಣ ವಸೂಲಿ ಮಾಡಲಾಗುತ್ತಿದೆ.
ಹಿಂದೆ 10 ರಿಂದ 13 ಸಾವಿರ ರೂಪಾಯಿ ಕಟ್ಟುತ್ತಿದ್ದ ಜನರು ಈಗ ಲಕ್ಷಗಟ್ಟಲೆ ಹಣ ಪಾವತಿಸಬೇಕಾಗಿದೆ ಎಂದು ಕುಮಾರಸ್ವಾಮಿ ವಿವರಿಸಿದರು. ಇದು ಜನರ ಮೇಲೆ ತೆರಿಗೆ ವಿಧಿಸಿ 6ನೇ ಗ್ಯಾರಂಟಿ ನೀಡಲು ಹೊರಟಿದ್ದಾರೆ ಎಂದು ಟೀಕಿಸಿದರು.
ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ಜನರ ಸುಲಿಗೆ ಮಾಡುತ್ತಿದೆ. ಕೇವಲ ಹಣ ಗಳಿಕೆಯ ಚಿಂತನೆಯಲ್ಲಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರದಲ್ಲಿ ಹಣ ಇಲ್ಲದಿರುವುದರಿಂದ ಎಲ್ಲ ಕಡೆಗಳಿಂದ ಹಣ ಸಂಗ್ರಹಕ್ಕೆ ಮುಂದಾಗಿದೆ.
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಸಹ ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು. ಜೆಡಿಎಸ್‌ನ ಕೊಡುಗೆಯ ಬಗ್ಗೆ ಮುಖ್ಯಮಂತ್ರಿಗಳು ಹಾಸನದಲ್ಲಿ ಪ್ರಶ್ನಿಸಿದ್ದಕ್ಕೆ ಉತ್ತರಿಸಿದ ಕುಮಾರಸ್ವಾಮಿ, 2018ರಲ್ಲಿ ತಾವು ನೀಡಿದ 500 ಕೋಟಿ ರೂಪಾಯಿ ಅನುದಾನದಲ್ಲಿ ಇನ್ನೂ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ತಮ್ಮ ಆರೋಗ್ಯ ವಿಚಾರಿಸಲು ದೆಹಲಿಗೆ ಬಂದಾಗ ಹೇಳಿದ್ದನ್ನು ಉಲ್ಲೇಖಿಸಿದರು. ಯಾರು ಹೆಚ್ಚು ಅನುದಾನ ನೀಡಿದ್ದಾರೆ ಎಂಬುದರ ಬಗ್ಗೆ ಮುಖ್ಯಮಂತ್ರಿಗಳು ದಾಖಲೆಗಳನ್ನು ಜನರ ಮುಂದಿಡಲಿ ಎಂದು ಸವಾಲು ಹಾಕಿದರು.
ಮಂಡ್ಯದಲ್ಲಿ ಹೊಸದಾಗಿ ನಿರ್ಮಿಸಿರುವ ಸುಸಜ್ಜಿತ ಆಟೋ ನಿಲ್ದಾಣವನ್ನು ಉದ್ಘಾಟಿಸಿದ ಕುಮಾರಸ್ವಾಮಿ, ಈ ನಿಲ್ದಾಣವು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ತಮ್ಮ ಸಂಸತ್ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಾಣವಾಗಿದೆ ಎಂದು ತಿಳಿಸಿದರು.
ಇದು ಆಟೋ ಚಾಲಕರು ಮತ್ತು ಪ್ರಯಾಣಿಕರಿಗೆ ಬಹಳ ಅನುಕೂಲವಾಗಲಿದೆ. ಮಳೆ, ಬಿಸಿಲಿನಲ್ಲಿ ಕಷ್ಟಪಡುತ್ತಿದ್ದ ಆಟೋ ಚಾಲಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅನುದಾನ ನೀಡಿದ ದೇವೇಗೌಡರಿಗೆ ಧನ್ಯವಾದ ಅರ್ಪಿಸಿದರು.