ಸಂ.ಕ.ಸಮಾಚಾರ ಮೈಸೂರು: ಅಧಿಕಾರ ವಿರೋಧಿ ಅಲೆ, ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತ ನೀಡಲು ಕೋರಲಾಗುವುದು ಎಂದರು. ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಗಳ ಮಾದರಿಯನ್ನು ಅನುಸರಿಸಿದೆ.
ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು, ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನ ನಿರ್ಮೂಲನೆಯಾಗಿಲ್ಲ. ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತಚಲಾಯಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಬಾರಿ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದರು.

























